ಕೊಪ್ಪಳ: ಸಂಸದ ಸಂಗಣ್ಣ ಕರಡಿ ಸಂಸದ ಸ್ಥಾನಕ್ಕೆ ಮತ್ತು ಬಿಜೆಪಿಯ ಸದಸ್ಯತ್ವಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಸಂಗಣ್ಣ ಕರಡಿ, ಸ್ವಾಭಿಮಾನಕ್ಕೆ ಧಕ್ಕೆಯಾದ ಕಾರಣ ಸಂಸತ್ ಸದಸ್ಯ ಸ್ಥಾನ ಹಾಗೂ ಬಿಜೆಪಿಗೆ ರಾಜೀನಾಮೆ ನೀಡಿದ್ದೇನೆ ಎಂದಿದ್ದಾರೆ.
ಈ ಕುರಿತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಇ-ಮೇಲ್ ಮೂಲಕ ಸಂಸತ್ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪತ್ರ ಕಳುಹಿಸಿದ್ದೇನೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ರಾಜೀನಾಮೆ ಪತ್ರ ರವಾನಿಸಿ ರಾಜೀನಾಮೆ ಅಂಗಿಕರಿಸಬೇಕು ಎಂದು ಕೋರಿದ್ದೇನೆ. ಕಳೆದ 10 ವರ್ಷದಿಂದ ಕೊಪ್ಪಳ ಲೋಕಸಭಾ ಕ್ಷೇತ್ರದ ಜನರ ಆಶೀರ್ವಾದ ದಿಂದ ಸಂಸದನಾಗಿ ಕೆಲಸ ಮಾಡಿದ್ದೇನೆ. ನಾನು ಸಂಸದನಾಗುವ ಮೊದಲು ರೈಲ್ವೆ, ಹೆದ್ದಾರಿ ಹಾಗೂ ಕೇಂದ್ರ ಸರ್ಕಾರ ಸರ್ಕಾರದ ಯೋಜನೆಗಳು ಜನರಿಗೆ ನಿರೀಕ್ಷಿತ ಮಟ್ಟದಲ್ಲಿ ತಲುಪಿರಲಿಲ್ಲ. ನಾನು ಸಂಬಂಧಿಸಿದ ಕೇಂದ್ರ ಸಚಿವರಿಗೆ ಪತ್ರ ಬರೆದು ಭೇಟಿಯಾಗಿ ಕೊಪ್ಪಳ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ ಕಾಮಗಾರಿ ತಂದಿರುವ ಹೆಮ್ಮೆ ನನಗಿದೆ ಎಂದಿದ್ದಾರೆ.
ಇತ್ತೀಚಿನ ರಾಜಕಾರಣ ನನಗೆ ಬೇಸರ ತರಿಸಿದೆ. ನನ್ನ ಸಾರ್ವಜನಿಕರ ಸೇವೆ ಗುರುತಿಸುವಲ್ಲಿ ಬಿಜೆಪಿ ಸಂಪೂರ್ಣ ವಿಫಲವಾಗಿದೆ. ಬಿಜೆಪಿ ನನ್ನ ಕೈ ಬಿಟ್ಟರೂ ಕೊಪ್ಪಳ ಲೋಕಸಭಾ ಕ್ಷೇತ್ರದ ಜನತೆ ನನ್ನ ಜತೆಗಿದ್ದಾರೆ. ನನ್ನ ಕೊನೆ ಉಸಿರಿರುವವರೆಗೂ ಜನಸೇವೆ ಮಾಡುತ್ತೇನೆ ಎಂದಿದ್ದಾರೆ.