ಶಿವಮೊಗ್ಗ: ಅಮೀರ್ ಅಹಮದ್ ವೃತ್ತದಲ್ಲಿ ಇರಿಸಲಾಗಿದ್ದ ಸಾವರ್ಕರ್ ಫ್ಲೆಕ್ಸ್ ತೆರವು ಮಾಡಿದ ಬೆನ್ನಲ್ಲೇ ಕೆಲಕಾಲ ಉದ್ವಿಗ್ನ ವಾತಾವರಣ ಉಂಟಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಶಿವಮೊಗ್ಗ ನಗರ ಹಾಗೂ ಭದ್ರಾವತಿ ಪಟ್ಟಣ ವ್ಯಾಪ್ತಿಯ ಎಲ್ಲಾ ಶಾಲಾ-ಕಾಲೇಜುಗಳಿಗೆ ಇಂದು (ಆ.16) ರಜೆ ನೀಡಲಾಗಿದೆ.
ಸೋಮವಾರ ನಗರದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು.
ಸೆಕ್ಷನ್ 144 ಹಿನ್ನೆಲೆ ಕುವೆಂಪು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೂ ಕುಲಪತಿ ಪ್ರೊ. ಬಿ.ಪಿ. ವೀರಭದ್ರಪ್ಪ ಇಂದು ರಜೆ ಘೋಷಿಸಿದ್ದಾರೆ. ವಿಶ್ವವಿದ್ಯಾಲಯಕ್ಕೆ ಪ್ರತಿ ದಿನ ಶಿವಮೊಗ್ಗ ಮತ್ತು ಭದ್ರಾವತಿ ನಗರಗಳಿಂದ ಪ್ರಯಾಣಿಸುವ ವಿದ್ಯಾರ್ಥಿಗಳಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಜೆ ನೀಡಲಾಗಿದೆ. ಆದರೆ ಉಪನ್ಯಾಸಕರು ಮತ್ತು ಅಧ್ಯಾಪಕೇತರ ಸಿಬ್ಬಂದಿ ಎಂದಿನಂತೆ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.