Home ಟಾಪ್ ಸುದ್ದಿಗಳು ಸ್ವಾತಂತ್ರ್ಯ ಹೋರಾಟಗಾರರ ಸಾಲಿನಲ್ಲಿ ಸಾವರ್ಕರ್ ಫೋಟೋ: ಶಿವಮೊಗ್ಗ ಪಾಲಿಕೆ ಆಯುಕ್ತರ ವಿರುದ್ಧ ದೂರು: ರಿಯಾಝ್ ಅಹ್ಮದ್

ಸ್ವಾತಂತ್ರ್ಯ ಹೋರಾಟಗಾರರ ಸಾಲಿನಲ್ಲಿ ಸಾವರ್ಕರ್ ಫೋಟೋ: ಶಿವಮೊಗ್ಗ ಪಾಲಿಕೆ ಆಯುಕ್ತರ ವಿರುದ್ಧ ದೂರು: ರಿಯಾಝ್ ಅಹ್ಮದ್

►ಪ್ರಕರಣ ದಾಖಲಿಸದಿದ್ದರೆ ಕಾನೂನು ಹೋರಾಟದ ಎಚ್ಚರಿಕೆ

ಶಿವಮೊಗ್ಗ: ಶಿವಮೊಗ್ಗದ ಮಾಲ್ ಒಂದರಲ್ಲಿ ಏರ್ಪಡಿಸಿದ್ದ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರ ಪ್ರದರ್ಶನದಲ್ಲಿ, ಬ್ರಿಟಿಷರೊಂದಿಗೆ ಕ್ಷಮೆಯಾಚಿಸಿ, ಹೋರಾಟದಿಂದ ವಿಮುಖರಾಗಿ ಬ್ರಿಟಿಷರೊಂದಿಗೆ ಕೈಜೋಡಿಸಿದ ಸಾವರ್ಕರ್ ಫೋಟೋವನ್ನು ಅಳವಡಿಸುವ ಮೂಲಕ ನೈಜ ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನ ಮಾಡಲಾಗಿದೆ ಹಾಗೂ ಒಂದು ಸಮುದಾಯದ ಜನರ ಭಾವನೆಗಳಿಗೆ ಧಕ್ಕೆ ತರಲಾಗಿದೆ. ಇದಕ್ಕೆ ಕಾರಣಕರ್ತರಾದ ಮಹಾನಗರ ಪಾಲಿಕೆಯ ಕಮಿಷನರ್ ಪ್ರಮೋದ್ ಎಚ್.ಪಿ. ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಶಿವಮೊಗ್ಗ ಪೀಸ್ ಆರ್ಗನೈಸೇಶನ್ ನ ಮುಖ್ಯಸ್ಥ ರಿಯಾಝ್ ಅಹ್ಮದ್ ಅವರು ದೊಡ್ಡಪೇಟೆ ಪೊಲೀಸ್ ಠಾಣೆ ಹಾಗೂ ಶಿವಮೊಗ್ಗ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ.

ದೂರು ಸ್ವೀಕರಿಸಿರುವ ಪೊಲೀಸರು ಇದುವರೆಗೆ ಎಫ್ ಐಆರ್ ದಾಖಲಿಸಿಲ್ಲ. ಆದ್ದರಿಂದ ನ್ಯಾಯಾಲಯದ ಮೊರೆ ಹೋಗಿ ಕಾನೂನು ಹೋರಾಟ ನಡೆಸಲಾಗುವುದು ಎಂದು ರಿಯಾಝ್ ಅಹ್ಮದ್ ತಿಳಿಸಿದ್ದಾರೆ.

ಭಾರತದ ಸಂವಿಧಾನದ ಶಿಷ್ಟಾಚಾರವನ್ನು ಉಲ್ಲಂಘಿಸಿ ಸ್ವಾಭಿಮಾನಿ ಸ್ವಾತಂತ್ರ್ಯ ಹೋರಾಟಗಾರರನ್ನು ಕಡೆಗಣಿಸಿ ಕೇವಲ ಒಂದು ರಾಜಕೀಯ ಪಕ್ಷಕ್ಕೆ ಸೇರಿದ ವ್ಯಕ್ತಿಯನ್ನು ಸ್ವಾತಂತ್ರ್ಯ ಹೋರಾಟಗಾರ ಎಂದು ಸಾವರ್ಕರ್ ಅವರ ಫೋಟೋವನ್ನು ಮಹಾನಗರ ಪಾಲಿಕೆಯ ಕಮಿಷನರ್ ಪ್ರಮೋದ್ ಹೆಚ್ ಪಿ ಅವರು ತಮ್ಮ ಅಧಿಕಾರ ವ್ಯಾಪ್ತಿಯನ್ನು ಮೀರಿ ಬ್ಯಾರಿ ಸೆಂಟರ್ ನಲ್ಲಿ ಇಟ್ಟಿದ್ದಾರೆ. ಈ ಮೂಲಕ ಅವರು ಒಂದು ಕೋಮು ಮತ್ತು ಸ್ವಾತಂತ್ರ್ಯ ಹೋರಾಟಗಾರರು ಕುಟುಂಬಗಳಿಗೆ ಅವಮಾನ ಮಾಡಿದ್ದಾರೆ. ಅಧಿಕಾರ ದುರ್ಬಳಕೆ ಮಾಡಿ ನಗರದ ಕೆಲವೊಂದು ಅಮಾಯಕರ ಮೇಲೆ ಸುಳ್ಳು ಪ್ರಕರಣ ದಾಖಲಿಸಿದ್ದಾರೆ ಎಂದು ರಿಯಾಝ್ ದೂರಿನಲ್ಲಿ ತಿಳಿಸಿದ್ದಾರೆ.

ಸಾವರ್ಕರ್ ಬ್ರಿಟಿಷರೊಂದಿಗೆ ಕ್ಷಮೆಯಾಚಿಸಿ ಸ್ವಾತಂತ್ರ್ಯ ಹೋರಾಟದಿಂದ ಹಿಂದೆ ಸರಿದು ಬ್ರಿಟಿಷರೊಂದಿಗೆ ಕೈಜೋಡಿಸಿದ್ದು ಎಲ್ಲರಿಗೂ ತಿಳಿದ ವಿಚಾರ. ಇಂತಹ ವ್ಯಕ್ತಿಯ ಫೋಟೋವನ್ನು ನೈಜ ಸ್ವಾತಂತ್ರ್ಯ ಹೋರಾಟಗಾರರ ಸಾಲಿನಲ್ಲಿ ಇರಿಸಿರುವುದು ಸರಿಯಲ್ಲ. ಇದನ್ನು ಪ್ರಶ್ನಿಸಿದ್ದ ಸಾರ್ವಜನಿಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿ ಜೈಲಿಗೆ ಹಾಕಿರುವುದು ಅಕ್ಷಮ್ಯ. ಆದ್ದರಿಂದ ಈ ಎಲ್ಲಾ ಘಟನೆಗಳಿಗೆ ಕಾರಣರಾದ ಮಹಾನಗರ ಪಾಲಿಕೆ ಆಯುಕ್ತರ ವಿರುದ್ಧ ಕ್ರಮಕೈಗೊಳ್ಳಬೇಕು. ಸರ್ಕಾರದ ಒತ್ತಡಕ್ಕೆ ಮಣಿದು ಅವರು ಕಾನೂನುಬಾಹಿರ ಕೃತ್ಯವೆಸಗಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಿಸಲಿದ್ದರೆ ನ್ಯಾಯಾಲಯದ ಮೊರೆ ಹೋಗಲಾಗುವುದು ಎಂದು ಅವರು ತಿಳಿಸಿದ್ದಾರೆ.

Join Whatsapp
Exit mobile version