ನವದೆಹಲಿ: ಏಕನಾಥ್ ಶಿಂದೆ ಬಣವು ತನ್ನನ್ನು ನಿಜವಾದ ಶಿವಸೇನೆ ಎಂದು ಪರಿಗಣಿಸಿ ಪಕ್ಷದ ಚುನಾವಣಾ ಚಿಹ್ನೆಯನ್ನು ನೀಡಬೇಕು ಎಂಬ ಮನವಿಯ ಬಗ್ಗೆ ಸದ್ಯಕ್ಕೆ ಯಾವುದೇ ನಿರ್ಧಾರ ತೆಗೆದುಕೊಳ್ಳದಂತೆ ಸುಪ್ರೀಂ ಕೋರ್ಟ್ ಗುರುವಾರ ಚುನಾವಣಾ ಆಯೋಗಕ್ಕೆ ಸೂಚಿಸಿದೆ.
ಇತ್ತೀಚಿನ ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿಗೆ ಸಂಬಂಧಿಸಿದ ವಿಷಯಗಳನ್ನು ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸುವ ಬಗ್ಗೆ ಸೋಮವಾರದೊಳಗೆ ನಿರ್ಧಾರ ತೆಗೆದುಕೊಳ್ಳುವುದಾಗಿ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ನ್ಯಾಯಪೀಠ ತಿಳಿಸಿದೆ.
ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠವು, ಈ ವಿಷಯವನ್ನು ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠಕ್ಕೆ ಒಪ್ಪಿಸಬೇಕೇ ಬೇಡವೇ ಎಂಬುದನ್ನು ನಾವು ನಿರ್ಧರಿಸುತ್ತೇವೆ ಎಂದು ಹೇಳಿದರು.