SC-ST ದೌರ್ಜನ್ಯ: ಬಾಕಿ ಪ್ರಕರಣ ಶೀಘ್ರ ಇತ್ಯರ್ಥಕ್ಕೆ ಕ್ರಮ ವಹಿಸಲು ಮುಖ್ಯಮಂತ್ರಿ ಸೂಚನೆ

Prasthutha|

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಶೀಘ್ರ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದರು.

- Advertisement -


ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದಲ್ಲಿ ದೌರ್ಜನ್ಯ ಪ್ರತಿಬಂಧ ಅಧಿನಿಯಮ 1989 (ತಿದ್ದುಪಡಿ ಕಾಯ್ದೆ 2015) ಮತ್ತು ನಿಯಮಗಳು 1995 (ತಿದ್ದುಪಡಿ ನಿಯಮಗಳು 2016) ರಡಿ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿಯ ಸಭೆ ನಡೆಯಿತು.


ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಯವರು ಗೃಹ ಮತ್ತು ಕಾನೂನು ಇಲಾಖೆಯೊಂದಿಗೆ ಸಮನ್ವಯ ವಹಿಸಿ, ತನಿಖೆಯ ಹಂತದಲ್ಲಿ, ಚಾರ್ಜ್ ಶೀಟ್ ಸಲ್ಲಿಸುವಾಗ ಹಾಗೂ ಪ್ರಾಸಿಕ್ಯೂಷನ್ ಸಂದರ್ಭದಲ್ಲಿಯೂ ವಿಳಂಬವಾಗದಂತೆ ಕ್ರಮ ವಹಿಸಬೇಕು. ಅಪರಾಧ ಸಾಬೀತು ಪ್ರಮಾಣ ಹೆಚ್ಚಿಸಬೇಕು ಎಂದು ಅವರು ನಿರ್ದೇಶನ ನೀಡಿದರು. ಸಭೆಯ ತೀರ್ಮಾನಗಳ ಕುರಿತು ಪ್ರತಿ ತಿಂಗಳೂ ಪರಿಶೀಲನೆ ನಡೆಸುವಂತೆ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚಿಸಿದರು. ರಾಜ್ಯಮಟ್ಟದ ಸಮಿತಿಯು ತುರ್ತು ವಿಷಯಗಳಿದ್ದಲ್ಲಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಲು ನಿರ್ಧರಿಸಲಾಯಿತು. ಮೂರು ತಿಂಗಳಿಗೊಮ್ಮೆ ಜಿಲ್ಲಾಧಿಕಾರಿಗಳು ಹಾಗೂ ಉಪವಿಭಾಗಾಧಿಕಾರಿಗಳ ಹಂತದಲ್ಲಿ ಸಭೆಗಳು ನಿಯಮಿತವಾಗಿ ನಡೆಸಿ, ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಒಂದು ತಿಂಗಳ ಒಳಗೆ ಸಭೆಯ ತೀರ್ಮಾನಗಳ ಕುರಿತು ಕೈಗೊಂಡ ಕ್ರಮಗಳ ಕುರಿತು ವರದಿ ನೀಡಲು ಸೂಚಿಸಿದರು.

- Advertisement -


ದೌರ್ಜನ್ಯ ಪ್ರಕರಣಗಳ ದೂರುದಾರರು ಮತ್ತು ಸಾಕ್ಷಿದಾರರ ರಕ್ಷಣೆಗೆ ಒತ್ತು ನೀಡಬೇಕು. ಸೂಕ್ಷ್ಮ ಪ್ರಕರಣಗಳಲ್ಲಿ ದೂರುದಾರರು ಮತ್ತು ಸಾಕ್ಷಿದಾರರನ್ನು ಪೊಲೀಸರೇ ಕರೆದೊಯ್ಯುವಂತೆ ಸೂಚಿಸಿದರು. ಜೊತೆಗೆ ಈ ಪ್ರಕರಣಗಳ ಸಂಪೂರ್ಣ ಮೇಲುಸ್ತುವಾರಿಗೆ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅವರನ್ನು ನೇಮಕ ಮಾಡಲು ತೀರ್ಮಾನಿಸಲಾಯಿತು.
ಅನುಸೂಚಿತ ಬುಡಕಟ್ಟು ಹಾಗೂ ಇತರ ಪಾರಂಪರಿಕ ಅರಣ್ಯ ವಾಸಿಗಳ ಅಧಿನಿಯಮ 2006 ರಡಿ 1.8 ಲಕ್ಷಕ್ಕೂ ಹೆಚ್ಚು ಅರ್ಜಿಗಳು ತಿರಸ್ಕೃತಗೊಂಡಿವೆ. ಈ ಕುರಿತಂತೆ ರಾಜ್ಯಮಟ್ಟದಲ್ಲಿಯೂ ಮರು ಪರಿಶೀಲನಾ ಸಮಿತಿ ರಚಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಇದಕ್ಕೆ ಮೂವರು ಅಧಿಕಾರೇತರ ಸದಸ್ಯರನ್ನು ನಾಮನಿರ್ದೇಶನ ಮಾಡಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು. ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿ, ಈ ಸಮುದಾಯಗಳ ಹಕ್ಕು ಕಸಿದುಕೊಳ್ಳುವವರ ವಿರುದ್ಧ ಹಾಗೂ ನಕಲಿ ಜಾತಿ ಪ್ರಮಾಣ ಪತ್ರ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಿದರು.


ದೌರ್ಜನ್ಯ ಪ್ರಕರಣಗಳಲ್ಲಿ ಮೃತಪಟ್ಟವರ ಅವಲಂಬಿತರಿಗೆ ಅನುಕಂಪ ಆಧಾರದಲ್ಲಿ ಸರ್ಕಾರಿ ನೌಕರಿಗೆ ಅರ್ಜಿ ಸಲ್ಲಿಸಲು 2 ವರ್ಷ ಅವಧಿ ಹಾಗೂ ಅಪ್ರಾಪ್ತ ವಯಸ್ಕರಿಗೆ ಅರ್ಜಿ ಸಲ್ಲಿಸಲು 3 ವರ್ಷಗಳ ಅವಧಿ ನಿಗದಿ ಪಡಿಸಿ ನಿಯಮಗಳಿಗೆ ತಿದ್ದುಪಡಿ ಮಾಡುವಂತೆ ಸೂಚಿಸಿದರು. ಪರಿಶಿಷ್ಟ ಜಾತಿ, ಪಂಗಡದವರ ಶಿಕ್ಷಣ, ಉದ್ಯೋಗ ಮತ್ತು ಸಬಲೀಕರಣಕ್ಕೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದ ಮುಖ್ಯಮಂತ್ರಿಗಳು . ಈ ಸಮುದಾಯಗಳ ಕಲ್ಯಾಣ ಕಾರ್ಯಕ್ರಮಗಳನ್ನು ಸಮಯಕ್ಕೆ ಸರಿಯಾಗಿ ಅನುಷ್ಠಾನಗೊಳಿಸುವಂತೆ ಸೂಚಿಸಿದ್ದಾರೆ. ಗಂಗಾ ಕಲ್ಯಾಣ ಯೋಜನೆಯಡಿ ಕೊರೆದ ಕೊಳವೆಬಾವಿಗಳಿಗೆ ವಿದ್ಯುತ್ ಸಂಪರ್ಕ ಒದಗಿಸಲು ಎಸ್ಕಾಂಗಳು ಎಸ್ ಸಿ ಪಿ, ಟಿ ಎಸ್ ಪಿ ಅನುದಾನ ಬಳಕೆ ಮಾಡುವಂತೆ ಸೂಚಿಸಲಾಗಿದೆ. ಎಸ್.ಸಿ.ಪಿ/ ಟಿಎಸ್ ಪಿ ಕಾಯ್ದೆಯನ್ವಯ ಈ ಸಮುದಾಯಗಳಿಗೆ ನಿಗದಿ ಪಡಿಸಿದ ಅನುದಾನ, ಅವರ ಕ್ಷೇಮಾಭಿವೃದ್ಧಿಗೇ ಬಳಕೆಯಾಗುವ ಕುರಿತು ಕಾಯ್ದೆಗೆ ತಿದ್ದುಪಡಿ ಮಾಡಲು ಕ್ರಮ ವಹಿಸುವಂತೆ ಕಾನೂನು ಇಲಾಖೆಗೆ ಸೂಚನೆ ನೀಡಿದರು.


ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಬಿ. ಶ್ರೀರಾಮುಲು, ಜೆ..ಸಿ. ಮಾಧುಸ್ವಾಮಿ ಸಮಿತಿಯ ಸದಸ್ಯರಾದ ಸಂಸದರು, ಶಾಸಕರು ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Join Whatsapp