ರಾಜ್ಯ ವಿಧಾನಸಭಾ ಚುನಾವಣೆಗೆ ವೇಳಾಪಟ್ಟಿ ಪ್ರಕಟ: ಮೇ 10ಕ್ಕೆ ಮತದಾನ, ಮೇ 13ಕ್ಕೆ ಫಲಿತಾಂಶ

Prasthutha|

ನವದೆಹಲಿ: ಬಹುನಿರೀಕ್ಷಿತ ಕರ್ನಾಟಕ ವಿಧಾನಸಭಾ ಚುನಾವಣೆಗೆ ವೇಳಾಪಟ್ಟಿ ಪ್ರಕಟಗೊಂಡಿದೆ. ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 13ರಂದು ಫಲಿತಾಂಶ ಹೊರಬರಲಿದೆ.

- Advertisement -


ನವದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್, ಕರ್ನಾಟಕ ವಿಧಾನಸಭೆಯ ವೇಳಾಪಟ್ಟಿಯನ್ನು ಪ್ರಕಟಿಸಿ ಸಂಪೂರ್ಣ ವಿವರ ನೀಡಿದ್ದಾರೆ. ಇಂದಿನಿಂದಲೇ ರಾಜ್ಯಾದ್ಯಂತ ನೀತಿಸಂಹಿತೆ ಜಾರಿಗೆ ಬಂದಿದೆ.

ಏಪ್ರಿಲ್ 13ರಂದು ಕರ್ನಾಟಕ ವಿಧಾನಸಭಾ ಚುನಾವಣೆಯ ಅಧಿಸೂಚನೆ ಹೊರಡಿಸಲಿದ್ದು, ಅಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಏಪ್ರಿಲ್ 20 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಏಪ್ರಿಲ್ 21ರಂದು ನಾಮಪತ್ರ ಪರಿಶಿಲನೆ ನಡೆಯಲಿದ್ದು, ಏಪ್ರಿಲ್ 24 ನಾಮಪತ್ರ ವಾಪಸ್ ಪಡೆಯಲು ಕಡೆಯ ದಿನ. ಮೇ 15ರಂದು ಚುನಾವಣೆಯ ಎಲ್ಲಾ ಪ್ರಕ್ರಿಯೆಗಳು ಪೂರ್ಣಗೊಳ್ಳಲಿದೆ.

- Advertisement -

ಒಟ್ಟು 58,282 ಮತಗಟ್ಟೆಗಳನ್ನು ತೆರೆಯಲಾಗಿದೆ. ಈ ಪೈಕಿ 12,000 ಮತಗಟ್ಟೆಗಳನ್ನು ಸೂಕ್ಷ್ಮ ಮತಗಟ್ಟೆ ಎಂದು ಪರಿಗಣಿಸಲಾಗಿದೆ. 80 ವರ್ಷ ಮೇಲ್ಪಟ್ಟವರಿಗೆ ಮೊದಲ ಬಾರಿಗೆ ಮನೆಯಿಂದಲೇ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ. ಆದರೆ ಅವರು ಮೊದಲೇ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ರಾಜೀವ್ ಕುಮಾರ್ ತಿಳಿಸಿದರು.
ಏಪ್ರಿಲ್ 1ಕ್ಕೆ 18 ವರ್ಷ ಪೂರ್ಣಗೊಳ್ಳುವವರಿಗೂ ಈ ಬಾರಿ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಈ ಸಲ ಮೊದಲ ಬಾರಿಗೆ 9,17,241 ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ ಎಂದು ಅವರು ತಿಳಿಸಿದರು.


ಕರ್ನಾಟಕ ವಿಧಾನಸಭಾ ಚುನಾವಣೆ
ಒಟ್ಟು ಮತದಾರರು- 5,21,73,579
ಪುರುಷ ಮತದಾರರು-2,62,42,561
ಮಹಿಳಾ ಮತದಾರರು-2,59,26,319
ಮೊದಲ ಬಾರಿ ಮತದಾರರು-9,17,241
80 ವರ್ಷ ಮೇಲ್ಪಟ್ಟ ಮತದಾರರು- 12,15,763
ವಿಕಲಾಂಗ ಮತದಾರರು-5,55,073
ಒಟ್ಟು ಮತದಾನ ಕೇಂದ್ರ-58,282
ನಗರ ಪ್ರದೇಶ ಮತಗಟ್ಟೆಗಳು- 24,063
ಗ್ರಾಮೀಣ ಪ್ರದೇಶ ಮತಗಟ್ಟೆಗಳು-34,219
ಸೂಕ್ಷ್ಮ ಮತಗಟ್ಟೆಗಳು-12,000

2018ರ ಚುನಾವಣೆಯಲ್ಲಿ ಬಿಜೆಪಿ 104, ಕಾಂಗ್ರೆಸ್ 80, ಜೆಡಿಎಸ್ 37 ಸ್ಥಾನಗಳಲ್ಲಿ ವಿಜಯ ಸಾಧಿಸಿದ್ದವು. ಮೊದಲು ಜೆಡಿಎಸ್ ಕಾಂಗ್ರೆಸ್ ಸಮ್ಮಿಶ್ರ ಸರಕಾರ ರಚನೆಯಾದರೆ ಆಮೇಲೆ ಆಪರೇಶನ್ ಕಮಲ ನಡೆದು ಬಿಜೆಪಿ ಸರಕಾರ ಅಧಿಕಾರಕ್ಕೆ ಬಂತು.



Join Whatsapp