ಬೆಂಗಳೂರು: ಕರ್ನಾಟಕ ಸರ್ಕಾರವು ರಾಜ್ಯ ಅಲ್ಪಸಂಖ್ಯಾತ ಆಯೋಗದ ನೂತನ ಅಧ್ಯಕ್ಷರಾಗಿ ಯು ನಿಸಾರ್ ಅಹ್ಮದ್ (ನಿವೃತ್ತ ಐಜಿಪಿ) ಅವರನ್ನು ನೇಮಕ ಮಾಡಿದ್ದು, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಅವರಿಗೆ ಅಭಿನಂದನೆ ಸಲ್ಲಿಸಿದೆ.
ಯು. ನಿಸಾರ್ ಅಹ್ಮದ್ ಅವರು ಅವರು ಕರ್ನಾಟಕದಲ್ಲಿ 2012ರಲ್ಲಿ ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್( ಐಜಿಪಿ) ಆಗಿ ಸೇವೆ ಸಲ್ಲಿಸಿದ ಬಳಿಕ ನಿವೃತ್ತಿ ಹೊಂದಿದ್ದರು. ಅದಕ್ಕೂ ಮೊದಲು 2007ರಿಂದ 2011ರವರೆಗೆ ಬೆಂಗಳೂರು ನಗರದಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು. ನಿವೃತ್ತರಾದ ಬಳಿಕ ಬೆಂಗಳೂರಿನಲ್ಲೇ ನೆಲೆಸಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಇವರು ನ್ಯಾಷನಲ್ ಸೆಂಟರ್ ಫಾರ್ ರಿಸರ್ಚ್ ಆ್ಯಂಡ್ ಡೆವಲಪ್‌ಮೆಂಟ್ ಎಂಬ ಸಂಸ್ಥೆಯನ್ನು ಹುಟ್ಟು ಹಾಕಿದ್ದಾರೆ. ಈ ಸಂಸ್ಥೆಯ ಮೂಲಕ ಸ್ಲಮ್‌ಗಳಲ್ಲಿ ವಾಸಿಸುತ್ತಿರುವ ಜನರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಮುಟ್ಟಿಸುವ ಕಾರ್ಯ ಮಾಡುತ್ತಿದ್ದಾರೆ. ಕರ್ನಾಟಕ ರಾಜ್ಯದಲ್ಲಿರುವ ಸರಿಸುಮಾರು ಒಂದು ಕೋಟಿಯಷ್ಟು ಅಲ್ಪಸಂಖ್ಯಾತರಿಗೆ, ಆಯೋಗದ ಮೂಲಕ ನ್ಯಾಯ ಒದಗಿಸುವ ಕೆಲಸವನ್ನು, ಅತಿ ಹೆಚ್ಚು ಮುತುವರ್ಜಿಯಿಂದ ನಿರ್ವಹಿಸಲಿ ಎಂದು ಆಶಿಸುತ್ತೇನೆ ಎಂದು ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಪತ್ರಿಕಾ ಪ್ರಕಟನೆ ಮೂಲಕ ಹೇಳಿದ್ದಾರೆ.