ಸೆಪ್ಟೆಂಬರ್ 27ರ ಭಾರತ್ ಬಂದ್ ಗೆ ಬೆಂಬಲ ಸೂಚಿಸಿದ ಎಸ್.ಡಿ.ಪಿ.ಐ

Prasthutha|

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಾದಾತ್ಮಕ ಕೃಷಿ ಕಾಯ್ದೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಸಂಯುಕ್ತ ಕಿಸಾನ್ ಮೋರ್ಚಾ (ಎಸ್.ಕೆ.ಎಮ್) ಸೆಪ್ಟೆಂಬರ್ 27 ರಂದು ನಡೆಯುವ ಭಾರತ್ ಬಂದ್ ಗೆ ಕರೆ ನೀಡಿದೆ. ಈ ನಿಟ್ಟಿನಲ್ಲಿ ಎಸ್.ಕೆ.ಎಮ್ ಗೆ, ಸೋಷಿಯಲ್ ಡೇಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ) ಸಂಪೂರ್ಣ ಬೆಂಬಲ ನೀಡಲಿದೆ ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ತುಂಬೆ ತಿಳಿಸಿದ್ದಾರೆ.

- Advertisement -

ಎಸ್.ಡಿ.ಪಿ.ಐ ಪ್ರಾರಂಭದಿಂದಲೂ ರೈತರ ಆಂದೋಲನವನ್ನು ಬೆಂಬಲಿಸುತ್ತಿದೆ ಮತ್ತು ಕೃಷಿ ಕಾಯ್ದೆಗಳ ವಿರುದ್ಧ ದೇಶಾದ್ಯಂತ ನೂರಾರು ಪ್ರತಿಭಟನೆಗಳನ್ನು ಹಮ್ಮಿಕೊಂಡಿದೆ. ಪ್ರತಿಭಟನೆಗಳಲ್ಲಿ ಭಾಗವಹಿಸಿದ ರೈತರ ಪೈಕಿ 700 ಕ್ಕೂ ಮಿಕ್ಕಿದ ಹುತಾತ್ಮರಾದ ಹೊರತಾಗಿಯೂ ರೈತರ ಕುರಿತಾಗಲೀ, ರೈತಪರ ಸಂಘಟನೆಗಳ ಕುರಿತಾಗಲೀ ಒಕ್ಕೂಟ ಸರ್ಕಾರಕ್ಕೆ ಯಾವುದೇ ರೀತಿಯ ಕಾಳಜಿಯಿಲ್ಲ. ಮಾತ್ರವಲ್ಲ ಒಕ್ಕೂಟ ಸರ್ಕಾರ ರೈತರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ. ನೂತನ ಕೃಷಿ ಕಾಯ್ದೆಗಳು ಕೃಷಿ ಪ್ರಧಾನ ಭಾರತೀಯ ಸಮುದಾಯಕ್ಕೆ ಸಂಪೂರ್ಣ ಹಾನಿಕಾರಕವಾಗಿದ್ದು, ಬಂಡವಾಳಶಾಹಿ ಮತ್ತು ಊಳಿಗಮಾನ್ಯ ವರ್ಗಗಳಿಗೆ ಮಾತ್ರ ಲಾಭದಾಯಕವಾಗಿದೆ.

ಈ ನಿಟ್ಟಿನಲ್ಲಿ ಪ್ರಸಕ್ತ ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ನೂತನ ಮೂರು ಕೃಷಿ ಕಾಯ್ದೆಗಳನ್ನು ತಕ್ಷಣ ಹಿಂಪಡೆಯಬೇಕು ಮತ್ತು ರೈತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಎಸ್.ಡಿ.ಪಿ.ಐ ಒತ್ತಾಯಿಸುತ್ತದೆ ಎಂದು ಇಲ್ಯಾಸ್ ಮುಹಮ್ಮದ್ ತುಂಬೆ ತಿಳಿಸಿದರು.

Join Whatsapp