► ಆ.19ರಿಂದ ಸೆ.3ರವರೆಗೆ ಪರೀಕ್ಷೆ
ಬೆಂಗಳೂರು: ಆಗಸ್ಟ್ -ಸೆಪ್ಟೆಂಬರ್ 2021ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ಮತ್ತು ದೋಷರಹಿತವಾಗಿ ನಡೆಸಲು ಪ್ರತಿ ಜಿಲ್ಲೆಯಲ್ಲೂ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕ್ರಮ ಕೈಗೊಳ್ಳಲಾಗುತ್ತಿದ್ದು ಈ ಬಗ್ಗೆ ಅಗತ್ಯ ಸಲಹೆ ಸೂಚನೆ ನೀಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಹೇಳಿದ್ದಾರೆ.
ಕೋವಿಡ್ ಹಿನ್ನೆಲೆಯಲ್ಲಿ ಈ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸಿದ ಹಿನ್ನೆಲೆಯಲ್ಲಿ ಎಲ್ಲಾ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗಿತ್ತು. ಆದರೆ ಪರೀಕ್ಷೆ ಬರೆಯುತ್ತೇವೆ ಎನ್ನುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು. ಇಂತಹ ವಿದ್ಯಾರ್ಥಿಗಳು ಹಾಗೂ ಖಾಸಗಿ ವಿದ್ಯಾರ್ಥಿಗಳಿಗೆ ಈ ಪರೀಕ್ಷೆ ನಡೆಯಲಿದೆ.
ದಿನಾಂಕ 19-8- 2021 ರಿಂದ 3-9 -2021 ರ ವರೆಗೆ ಈ ಪರೀಕ್ಷೆಗಳು ನಡೆಯಲಿದ್ದು, ಇಂದು ಈ ಸಂಬಂಧ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ತಮ್ಮ ವಿಧಾನಸೌಧದ ಕಚೇರಿಯಲ್ಲಿ ಸಭೆ ನಡೆಸಿದ ಸಚಿವ ಬಿ ಸಿ ನಾಗೇಶ್ ಪರೀಕ್ಷೆ ನಡೆಸಲು ಜಿಲ್ಲಾಧಿಕಾರಿಗಳು ಅಗತ್ಯವಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲು ಸೂಚನೆ ನೀಡಿದರು. ರಾಜ್ಯದಲ್ಲಿ ಒಟ್ಟು 5546 ಕಾಲೇಜುಗಳಿಂದ 18414 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದರು.
ಇದಕ್ಕಾಗಿ 187 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ ಕೇಂದ್ರಗಳಲ್ಲಿ 17-08- 2021 ರ ಒಳಗೆ ಪೂರ್ವಸಿದ್ಧತೆ ಆಗಿರುವ ಬಗ್ಗೆ ಜಿಲ್ಲಾಧಿಕಾರಿಗಳು ಖಚಿತ ಮಾಡಿಕೊಳ್ಳಬೇಕೆಂದು ಸೂಚಿಸಲಾಗಿದೆ ಎಂದು ಅವರು ಹೇಳಿದರು.
ಕರ್ನಾಟಕ ಸೆಕ್ಯೂರ್ ಎಕ್ಸಾಮಿನೇಷನ್ ಸಿಸ್ಟಮ್ ಪ್ರಕಾರ ಪರೀಕ್ಷೆಗೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.
ಸಭೆಯಲ್ಲಿ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್ ಆರ್.ಉಮಾಶಂಕರ್,ಪದವಿ ಪೂರ್ವ ಶಿಕ್ಷಣ ಮಂಡಳಿ ನಿರ್ದೇಶಕರಾದ ಸ್ನೇಹಲ್ ಸೇರಿದಂತೆ ಇಲಾಖೆಯ ಉನ್ನತ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ವಿಕಾಸ ಸೌಧದ ದಲ್ಲಿ ಆಯೋಜಿಸಿದ್ದ ವೀಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸಿದ ಸಚಿವರು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಮಾತನಾಡಿ ಅವರು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಗತ್ಯ ಸಲಹೆ ಸೂಚನೆ ನೀಡಿದರು.