ಬೆಂಗಳೂರು: ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ಇಂದು ಬೆಳಿಗ್ಗೆ ಸರಣಿ ಅಪಘಾತ ಸಂಭವಿಸಿ ಆಟೋ ಚಾಲಕನೋರ್ವ ಗಾಯಗೊಂಡಿದ್ದಾರೆ. ಟೆಂಪೋ, ಆಟೋ, ಬಿಎಂಟಿಸಿ ಬಸ್ ನಡುವೆ ಡಿಕ್ಕಿಯಾಗಿ ಸರಣಿ ಅಪಘಾತ ನಡೆದು ಆಟೋ ಜಖಂಗೊಂಡು ಅದರೊಳಗೆ ಸಿಲುಕಿ ಗಾಯಗೊಂಡಿದ್ದ ಚಾಲಕನನ್ನು ಅರ್ಧಗಂಟೆಗಳ ಕಾಲ ಹರಸಾಹಸ ನಡೆಸಿ ಸ್ಥಳೀಯರು ಹೊರಗೆ ತಂದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಚಿಕಿತ್ಸೆ ಪಡೆಯುತ್ತಿರುವ ಚಾಲಕನ ಕಾಲುಗಳಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ಡಿಸಿಪಿ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ.
ಸರಣಿ ಅಪಘಾತದಿಂದ ಮೈಸೂರು ರಸ್ತೆಯಲ್ಲಿ ಕೆಲ ಸಮಯ ಟ್ರಾಫಿಕ್ ಜಾಮ್ ಉಂಟಾಗಿದ್ದು ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ. ಬ್ಯಾಟರಾಯನಪುರ ಸಂಚಾರ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.