ಜೈಲಿನಲ್ಲಿ ಶಶಿಕಲಾಗೆ ಐಷಾರಾಮಿ ವ್ಯವಸ್ಥೆ| ಮೂವರು ಅಧಿಕಾರಿಗಳ ಮೇಲಿನ ಪ್ರಕರಣ ರದ್ದು

Prasthutha|

ಬೆಂಗಳೂರು: ತಮಿಳುನಾಡು ಮಾಜಿ ಸಿಎಂ ಜೆ ಜಯಲಲಿತಾ ಅವರ ಆಪ್ತೆ ಶಶಿಕಲಾ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗ ಅವರಿಗೆ ಐಷಾರಾಮಿ ಸೌಲಭ್ಯ ಕಲ್ಪಿಸಿದ ಆರೋಪ ಎದುರಿಸುತ್ತಿದ್ದ ಬೆಳಗಾವಿ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಕೃಷ್ಣ ಕುಮಾರ್, ಕರ್ನಾಟಕ ಕಾರಾಗೃಹ ಅಕಾಡೆಮಿಯ ಉಪ ನಿರ್ದೇಶಕಿ ಡಾ. ಆರ್ ಅನಿತಾ ಮತ್ತು ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯ ಇನ್ಸ್‌ಪೆಕ್ಟರ್ ಗಜರಾಜ ಅವರ ಮೇಲಿನ ಕ್ರಿಮಿನಲ್ ಪ್ರಕರಣವನ್ನು ರಾಜ್ಯ ಹೈಕೋರ್ಟ್ ರದ್ದುಪಡಿಸಿದೆ.

- Advertisement -

ಶಶಿಕಲಾ ಅವರಿಂದ ಎರಡು ಕೋಟಿ ರೂಪಾಯಿ ಲಂಚ ಪಡೆದು ಐಷಾರಾಮಿ ಸೌಲಭ್ಯ ಕಲ್ಪಿಸಲಾಗಿತ್ತು ಎಂಬ ಪ್ರಕರಣದಲ್ಲಿ ಕಾರಾಗೃಹ ಇಲಾಖೆಯ ನಿವೃತ್ತ ಡಿಜಿಪಿ ಎಚ್ ಎನ್ ಸತ್ಯನಾರಾಯಣ ಅವರು ಪ್ರಮುಖ ಆರೋಪಿಯಾಗಿದ್ದರು. ಅವರ ವಿರುದ್ಧ ಆರೋಪಗಳನ್ನು ಕೈ ಬಿಡಲಾಗಿತ್ತು. ಆದರೆ, ಅವರ ಸೂಚನೆಯಂತೆ ನಡೆದುಕೊಂಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಡಾ.ಅನಿತಾ ಮತ್ತು ಇತರೆ ಸಿಬ್ಬಂದಿಗಳ ವಿಚಾರಣೆ ಮುಂದುವರಿದಿತ್ತು. ಇದೀಗ ತಮ್ಮ ವಿರುದ್ಧದ ಪ್ರಕರಣ ರದ್ದುಪಡಿಸುವಂತೆ ಕೋರಿ ಪೊಲೀಸ್ ಅಧಿಕಾರಿಗಳಾದ ಗಜರಾಜ ಮಾಕನೂರ್, ಡಾ. ಆರ್ ಅನಿತಾ ಮತ್ತು ಕೃಷ್ಣ ಕುಮಾರ್ ಸಲ್ಲಿಸಿದ್ದ ಮೂರು ಪ್ರತ್ಯೇಕ ಅರ್ಜಿಗಳನ್ನು ನ್ಯಾಯಮೂರ್ತಿ ಕೆ ನಟರಾಜನ್ ನೇತೃತ್ವದ ಏಕಸದಸ್ಯ ಪೀಠವು ಮಾನ್ಯ ಮಾಡಿದೆ.

ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದಲ್ಲಿ 2017ರಲ್ಲಿ ಶಿಕ್ಷೆಗೆ ಒಳಗಾಗಿದ್ದ ಶಶಿಕಲಾ ಮತ್ತವರ ಸಂಬಂಧಿ ಇಳವರಸಿಗೆ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ವಿಶೇಷ ಸೌಲಭ್ಯ ಕಲ್ಪಿಸಲು ಎರಡು ಕೋಟಿ ರೂಪಾಯಿ ಲಂಚ ಪಡೆದ ಆರೋಪ ಕೇಳಿಬಂದಿತ್ತು. ಈ ಸಂಬಂಧ ನಿವೃತ್ತ ಐಎಎಸ್ ಅಧಿಕಾರಿ ವಿಜಯ್ ಕುಮಾರ್ ನೇತೃತ್ವದಲ್ಲಿ ವಿಚಾರಣೆ ನಡೆಸಿ ವರದಿ ಸಲ್ಲಿಸಲಾಗಿತ್ತು. ನಂತರ ಸರ್ಕಾರ ತನಿಖೆಯನ್ನು ಎಸಿಬಿಗೆ ವರ್ಗಾಯಿಸಿತ್ತು.

Join Whatsapp