ಶಿವಮೊಗ್ಗ: ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ; ಆಕರ್ಷಕ ಪಥ ಸಂಚಲನ

Prasthutha|

ಶಿವಮೊಗ್ಗ: ಜಿಲ್ಲಾಡಳಿತದ ವತಿಯಿಂದ ಡಿಎಆರ್ ಮೈದಾನದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಧ್ವಜಾರೋಹಣವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸಿ.ನಾರಾಯಣಗೌಡ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇಶವನ್ನು ಮತ್ತಷ್ಟು ಸದೃಢವಾಗಿ ಕಟ್ಟಲು ನಾವೆಲ್ಲರೂ ಸಂಕಲ್ಪ ಮಾಡಿಕೊಳ್ಳಬೇಕು. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾತ್ಮರ ಆದರ್ಶ ಮೈಗೂಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಪಣತೊಟ್ಟಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ವತಿಯಿಂದ ಅತಿವೃಷ್ಟಿಯಿಂದ ಹಾನಿಯಾದ ಮನೆಗಳಿಗೆ ಪರಿಹಾರ ಒದಗಿಸಲಾಗಿದೆ. . ಜಿಲ್ಲೆಯಲ್ಲಿ 6,451 ಮನೆಗಳು ನಿರ್ಮಾಣವಾಗಿವೆ. ವಿಮಾನ ನಿಲ್ದಾಣ, ಸಿಗಂದೂರು ಸೇತುವೆ, ರೈಲು ಮಾರ್ಗ, ಶೌಚಾಲಯಗಳು, ಬಸವ ವಸತಿ ಯೋಜನೆ ಸೇರಿ ಹಲವು ಯೋಜನೆಗಳನ್ನು ರೂಪಿಸಲಾಗಿದೆ ಎಂದರು.

ಜಿಲ್ಲಾ ಸಶಸ್ತ್ರ ಮೀಸಲು ಪಡೆ, ಪೊಲೀಸರು, ಹೋಂಗಾರ್ಡ್ಸ್, ಎನ್‌ಸಿಸಿ, ಅಬಕಾರಿ, ಸ್ಕೌಟ್ಸ್ ಅಂಡ್ ಗೈಡ್ಸ್, ಅಗ್ನಿ ಶಾಮಕದಳ ಸಿಬ್ಬಂದಿಗಳ ಸಹಯೋಗದೊಂದಿಗೆ ಆಕರ್ಷಕ ಪಥ ಸಂಚಲನ ನಡೆಯಿತು. ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಲಾಯಿತು. ಸ್ಮಾರ್ಟ್‌ ಸಿಟಿ ಯೋಜನೆಯ ವತಿಯಿಂದ ಪೊಲೀಸ್ ಇಲಾಖೆಗೆ ಆಧುನಿಕ 15 ಬೈಕ್‌ಗಳು, 5 ಡ್ರೋನ್‌ ಗಳನ್ನು ನೀಡಲಾಯಿತು.

- Advertisement -


ಕಾರ್ಯಕ್ರಮದಲ್ಲಿ ಶಾಸಕ ಕೆ.ಎಸ್.ಈಶ್ವರಪ್ಪ, ಆಯನೂರು ಮಂಜುನಾಥ್, ಎಸ್.ಎಲ್.ಭೋಜೇಗೌಡ, ಕೆ.ಬಿ.ಅಶೋಕ್ ನಾಯ್ಕ್, ಎಸ್.ರುದ್ರೇಗೌಡ, ಡಿ.ಎಸ್.ಅರುಣ್, ಮೇಯರ್ ಸುನಿತಾ ಅಣ್ಣಪ್ಪ, ಉಪ ಮೇಯರ್ ಶಂಕರ್ ಗನ್ನಿ, ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಿ ಪ್ರಸಾದ್, ಜಿಲ್ಲಾ ಪಂಚಾಯಿತಿ ಸಿಇಒ ಪ್ರಕಾಶ್, ಹೆಚ್ಚುವರಿ ಜಿಲ್ಲಾಧಿಕಾರಿ ನಾಗೇಂದ್ರ ಹೊನ್ನಳಿ, ಪಾಲಿಕೆ ಆಯುಕ್ತ ಮಾಯಣ್ಣ ಗೌಡ, ಸ್ಮಾರ್ಟ್ ಸಿಟಿ ಎಂಡಿ ಚಿದಾನಂದ ವಠಾರೆ ಉಪಸ್ಥಿತರಿದ್ದರು.

Join Whatsapp