ಚಿಕ್ಕಮಗಳೂರು: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಉಡುಪಿ, ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ನಾಯಕರ ಟಿಕೆಟ್ ಪೈಪೋಟಿ ಜೋರಾಗಿದೆ. ಹಾಲಿ ಸಂಸದೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಬಿಜೆಪಿ ಕಾರ್ಯಕರ್ತರ ಒಂದು ಬಣದ ‘ಶೋಭಾ ಹಠಾವೋ ಬಿಜೆಪಿ ಬಚಾವೋ’ ಅಭಿಯಾನ ತೀವ್ರಗೊಂಡಿದೆ. ಪಕ್ಷದ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಹೈಕಮಾಂಡ್ ನಾಯಕರಿಗೆ ಪತ್ರ ಬರೆದು ಶೋಭಾ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
3583 ದಿನಗಳಲ್ಲಿ 100 ದಿನವೂ ಕ್ಷೇತ್ರಕ್ಕೆ ಬಾರದ ಸಂಸದೆ ನಮಗೆ ಬೇಕೇ? ಕ್ಷೇತ್ರಕ್ಕೆ ಬಾರದ ಸಂಸದೆ ನಮಗೆ ಬೇಡವೇ ಬೇಡ ಎಂದು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಎಲ್ಲ ಬೆಳವಣಿಗೆಗಳ ಮಧ್ಯೆ, ಸಿಟಿ ರವಿಗೆ ಲೋಕಸಭೆ ಚುನಾವಣೆಗೆ ಟಿಕೆಟ್ ನೀಡುವಂತೆ ಅವರ ಬೆಂಬಲಿಗರು ಹಾಗೂ ಬಿಜೆಪಿ ಕಾರ್ಯಕರ್ತರು ನರೇಂದ್ರ ಮೋದಿ, ಅಮಿತ್ ಶಾ ಸೇರಿದಂತೆ ಬಿಜೆಪಿ ನಾಯಕರಿಗೆ ಪತ್ರ ಬರೆದಿದ್ದಾರೆ.