ಬೆಂಗಳೂರು: ಹಿಂದೆ ಕಾಂಗ್ರೆಸ್ ಆಡಳಿತವಿದ್ದಾಗ ಅಕ್ಕಿ, ಗೋಧಿಗಾಗಿ ಬೇರೆ ದೇಶದತ್ತ ನೋಡುತ್ತಿದ್ದ ಭಾರತವು ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬಿ ಆಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಶ್ರಮ ಮತ್ತು ದೂರದೃಷ್ಟಿಯ ಯೋಜನೆಗಳ ಫಲ ಇದಾಗಿದೆ. ಈ ಬಾರಿ 305 ಮಿಲಿಯನ್ ಮೆಟ್ರಿಕ್ ಟನ್ ಆಹಾರ ಉತ್ಪಾದನೆ ಮತ್ತು 326 ಮಿಲಿಯ ಮೆಟ್ರಿಕ್ ಟನ್ ತೋಟಗಾರಿಕಾ ಬೆಳೆ ಉತ್ಪಾದನೆ ಆಗಿದ್ದು, ಈ ವಿಚಾರದಲ್ಲಿ ದಾಖಲೆ ಉತ್ಪಾದನೆ ಸಾಧ್ಯವಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಹಾರ ರಫ್ತು ವಿಚಾರದಲ್ಲೂ ವಿಶೇಷ ಸಾಧನೆ ಮಾಡಲು ನಾವು ಮುಂದಾಗಿದ್ದೇವೆ. ಆಹಾರ ಪದಾರ್ಥ ರಫ್ತಿನಲ್ಲೂ ನಾವೀಗ 9ನೇ ಸ್ಥಾನದಲ್ಲಿದ್ದೇವೆ ಎಂದು ತಿಳಿಸಿದರು. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರು ಬೆಂಗಳೂರಿನಲ್ಲಿ ಇಂದು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ, ಸಿಹಿ ನೀಡಿ ಶುಭ ಕೋರಿದರು..
ಕಾಂಗ್ರೆಸ್ ಆಡಳಿತದಲ್ಲಿ ಕೃಷಿ ಮೂಲದಿಂದ ಜಿಡಿಪಿಗೆ ಕೇವಲ 13ರಿಂದ 14 ಶೇಕಡಾದಷ್ಟು ಕೊಡುಗೆ ಲಭಿಸುತ್ತಿತ್ತು. ಏಳು ವರ್ಷಗಳ ಬಿಜೆಪಿ ಆಡಳಿತದ ಬಳಿಕ ಅದು 20.22 ಶೇಕಡಾಕ್ಕೆ ಏರಿದೆ. ಈ ರೀತಿ ಕೃಷಿ ಇಲಾಖೆ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಮುಂದಾಗಿದೆ ಎಂದರು.