►ಡಿ.ಕೆ.ಶಿವಕುಮಾರ್ ಉಪ ಮುಖ್ಯಮಂತ್ರಿ
ಹೊಸದಿಲ್ಲಿ : ಪ್ರಚಂಡ ಬಹುಮತದಿಂದ ಕರ್ನಾಟಕದಲ್ಲಿ ಅಧಿಕಾರಕ್ಕೇರಿರುವ ಕಾಂಗ್ರೆಸ್ ಸರಕಾರವನ್ನು ಸಿದ್ದರಾಮಯ್ಯ ಮುನ್ನಡೆಸಲಿದ್ದಾರೆ. ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಿರುವುದಾಗಿ ಕಾಂಗ್ರೆಸ್ ಹೈಕಮಾಂಡ್ ಸರ್ವಾನುಮತದ ನಿರ್ಣಯ ಕೈಗೊಂಡಿದೆ. ಇನ್ನು ಕೆಲವೇ ಕ್ಷಣಗಳಲ್ಲಿ AICC ಕರೆದ ಸುದ್ಧಿಗೋಷ್ಠಿಯಲ್ಲಿ ಸಿಎಂ ಆಯ್ಕೆ ಬಗ್ಗೆ ಅಧಿಕೃತ ಘೋಷಣೆ ಹೊರ ಬೀಳುವ ಸಾಧ್ಯತೆ ಇದೆ.
ಕರ್ನಾಟಕದ ಮುಖ್ಯಮಂತ್ರಿ ಆಯ್ಕೆ ಕಗ್ಗಂಟನ್ನು ಹೈಕಮಾಂಡ್ ಕೊನೆಗೂ ಬಿಡಿಸಿದೆ. ಕಳೆದ ನಾಲ್ಕೈದು ದಿನಗಳಿಂದ ಸರಣಿ ಸಭೆಗಳ ಮೂಲಕ ಹೈಕಮಾಂಡ್ ನಾಯಕರು ಡಿಕೆ ಶಿವಕುಮಾರ್ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದು, ಮೇ 20ರಂದು ನೂತನ ಸಿಎಂ ಆಗಿ ಸಿದ್ದರಾಮಯ್ಯ ಅವರು ಪ್ರಮಾಣವಚನ ಸ್ವೀಕರಿಸುವುದು ಬಹುತೇಕ ಖಚಿತವಾಗಿದೆ. ಇನ್ನು ಸಿಎಂ ಹುದ್ದೆ ಪಟ್ಟು ಸಡಿಲಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಹೈಕಮಾಂಡ್ ಸೂತ್ರಕ್ಕೆ ಒಪ್ಪಿದ್ದಾರೆ.
ಬುಧವಾರ ತಡರಾತ್ರಿ ವರೆಗೆ ಕೆಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾಜುರ್ನ ಖರ್ಗೆ ಸುದೀರ್ಘ ರ್ಚೆ, ಸಭೆಗಳನ್ನು ಮಾಡಿ ಡಿಕೆ ಶಿವಕುಮಾರ್ ಅವರ ಮನವೊಲಿಸಿದ್ದಾರೆ. ಸಿಎಂ ಸ್ಥಾನಕ್ಕೆ ಪಟ್ಟು ಹಿಡಿದಿದ್ದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ಗೆ ಅಧಿಕಾರ ಹಂಚಿಕೆ ಸೂತ್ರದ ಮೂಲಕ ಇಬ್ಬರ ಮಧ್ಯೆ ಸಂಧಾನ ಮಾಡಿದೆ. ಅದೇನೆಂದರೆ ಸಿದ್ದರಾಮಯ್ಯ ಅವರಿಗೆ ಮೊದಲ ಎರಡುವರೆ ವರ್ಷ ನಂತರ ಡಿಕೆ ಶಿವಕುಮಾರ್ ಅವರಿಗೆ ಎರೆಡುವರೆ ವರ್ಷ ಸಿಎಂ ಪಟ್ಟ ಕಟ್ಟುವ ತೀರ್ಮಾನ ಮಾಡಲಾಗಿದೆ. ಇದಕ್ಕೆ ಡಿಕೆ ಶಿವಕುಮಾರ್ ಸಹ ಒಪ್ಪಿದ್ದಾರೆ. ಇದರೊಂದಿಗೆ ಎಲ್ಲಾ ಗೊಂದಲಗಳಿಗೆ ತೆರೆ ಬಿದ್ದಿದ್ದು, ಮೇ 20ರಂದು ಕಂಠೀರವ ಸ್ಟೇಡಿಯಂನಲ್ಲಿ ಸಿದ್ದರಾಮಯ್ಯ ಸಿಎಂ ಆಗಿ, ಡಿಕೆ ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಹೈಕಮಾಂಡ್ ನ 30: 30 ಸೂತ್ರಕ್ಕೆ ಒಪ್ಪಿದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್
ಕರ್ನಾಟಕದ ಮುಖ್ಯಮಂತ್ರಿ ಆಯ್ಕೆ ವಿಚಾರ ಬಗೆಹರಿದಿದೆ. ಅಧಿಕಾರ ಹಂಚಿಕೆ ಮಾಡಲಾಗಿದ್ದು, 5 ವರ್ಷಗಳ ಅಧಿಕಾರ ಅವಧಿಯಲ್ಲಿ ತಲಾ ಎರಡೂವರೆ ವರ್ಷಗಳ ಕಾಲ(30 ತಿಂಗಳು) ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಸಿಎಂ ಆಗಿ ಅಧಿಕಾರ ಅನುಭವಿಸಲಿದ್ದಾರೆ. ಮೊದಲನೇ ಅವಧಿಗೆ ಸಿದ್ದರಾಮಯ್ಯ ಸಿಎಂ ಹಾಗೂ ಡಿಕೆಶಿ ಡಿಸಿಎಂ ಆಗಲಿದ್ದಾರೆ. ಶನಿವಾರ (ಮೇ 20) ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಹುಲ್ ಗಾಂಧಿ ಸೇರಿದಂತೆ ಯಾವೊಬ್ಬ ವರಿಷ್ಠರ ಮಾತಿಗೂ ಬಗ್ಗದ ಡಿಕೆ ಶಿವಕುಮಾರ್ ಅಂತಿಮವಾಗಿ ಸೋನಿಯಾ ಗಾಂಧಿ ಸೂತ್ರಕ್ಕೆ ಬಗ್ಗಿದ್ದಾರೆ.