ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಕೊನೆಗೂ ಸಿದ್ದರಾಮಯ್ಯ ನಿರ್ಧರಿಸಿದ್ದು, ತಮ್ಮ ಆಪ್ತರಾದ ಪ್ರಭಾಕರ್ ಹಾಗೂ ವೆಂಕಟೇಶ್ ಮೂಲಕ ಕೆಪಿಸಿಸಿ ಕಾರ್ಯದರ್ಶಿ ಅವರಿಗೆ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ದಾರೆ.
ಆದರೆ, ಯಾವ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂಬ ಮಾಹಿತಿ ಅರ್ಜಿಯಲ್ಲಿ ಇಲ್ಲ. ಹೀಗಾಗಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡ್ತಾರೆ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಹಾಗೂ ಬಾದಾಮಿ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದರು. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಜಿ.ಟಿ.ದೇವೇಗೌಡರ ವಿರುದ್ಧ ಸೋಲು ಕಂಡಿದ್ದರು.
ವರದಿಗಳ ಪ್ರಕಾರ ಕೋಲಾರದಿಂದ ಸಿದ್ದರಾಮಯ್ಯರ ಸ್ಪರ್ಧೆ ಬಹುತೇಕ ಖಚಿತವಾಗಿದ್ದರೂ, ಹೈಕಮಾಂಡ್ ಎಲ್ಲಿ ಟಿಕೆಟ್ ನೀಡುತ್ತದೆಯೋ ಅಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಸಿಎಂ ಹೇಳಿದ್ದಾರೆ.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಬಯಸಿ 1,450ಕ್ಕೂ ಹೆಚ್ಚು ಆಕಾಂಕ್ಷಿಗಳು ಅರ್ಜಿ ಪಡೆದುಕೊಂಡಿದ್ದು, ಈ ಪೈಕಿ 1,280ಕ್ಕೂ ಹೆಚ್ಚು ಮಂದಿ ಅರ್ಜಿ ಸಲ್ಲಿಸಿದ್ದಾರೆ. ನಿನ್ನೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿತ್ತು.