ಮಂಗಳೂರು ಮುಸ್ಲಿಮರ ಆಕ್ರೋಶಕ್ಕೆ ಮಣಿದ ಸಿದ್ದರಾಮಯ್ಯ ಸರ್ಕಾರ

Prasthutha|

►ಸುಮೊಟೊ ಕೇಸ್ ದಾಖಲಿಸಿದ್ದ ಇನ್ಸ್’ಪೆಕ್ಟರ್ ವಿರುದ್ಧ ಇಲಾಖಾ ವಿಚಾರಣೆಗೆ ಆದೇಶ?

- Advertisement -

►ಬೆದರಿಕೆ ಹಾಕಿದ್ದ ಶರಣ್ ಪಂಪ್ವೆಲ್ ಗೆ ಕಲಂ 107 ಅಡಿ ಪೊಲೀಸರ ನೋಟಿಸ್?

ಮಂಗಳೂರು : ಕಂಕನಾಡಿ ಮಸೀದಿ ಪಕ್ಕದ ಒಳರಸ್ತೆಯಲ್ಲಿ ನಮಾಝ್ ನಿರ್ವಹಿಸಿದ್ದಕ್ಕೆ ಸುಮೊಟೊ ಕೇಸ್ ದಾಖಲಿಸಿರುವ ಪೊಲೀಸರ ಕ್ರಮದ ವಿರುದ್ಧ ಮುಸ್ಲಿಮರು ಆಕ್ರೋಶಗೊಂಡಿರುವುದರಿಂದ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ.

- Advertisement -


ನಮಾಝ್ ಮಾಡಿದವರ ಮೇಲೆ ದಾಖಲಾಗಿರುವ ಸುಮೊಟೊ ಕೇಸ್ ವಾಪಸ್ ಪಡೆಯುವುದು, ಕೇಸ್ ದಾಖಲಿಸಿದ್ದ ಕದ್ರಿ ಠಾಣಾ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ವಿರುದ್ಧ ಇಲಾಖಾ ವಿಚಾರಣೆ ನಡೆಸುವುದು, ನಮಾಝ್ ವಿಚಾರದಲ್ಲಿ ಬೆದರಿಕೆ ಹಾಕಿರುವ ವಿಹೆಚ್’ಪಿ ಮುಖಂಡ ಶರಣ್ ಪಂಪ್ ವೆಲ್ ಗೆ ಕಲಂ 107 ಅಡಿ ನೋಡಿಸ್ ಕೊಟ್ಟು ವಿಚಾರಣೆ ನಡೆಸಲು ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ರಾಜ್ಯ ಗೃಹ ಇಲಾಖೆ ಸೂಚನೆ ಕೊಟ್ಟಿರುವುದಾಗಿ ತಿಳಿದುಬಂದಿದೆ.


ಸುಮೊಟೊ ಕೇಸ್ ದಾಖಲಿಸಿದ್ದ ಪೊಲೀಸರ ಕ್ರಮವನ್ನು ವಿರೋಧಿಸಿ ನಿನ್ನೆ ದ.ಕ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ಕೆ.ಕೆ ನೇತೃತ್ವದಲ್ಲಿ ಮುಸ್ಲಿಂ ಮುಖಂಡರು ಮಂಗಳೂರು ನಗರ ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ಸುಮೊಟೋ ಕೇಸ್ ವಾಪಸ್ ಪಡೆಯುವಂತೆ ಒತ್ತಾಯಿಸಿದ್ದರು. ಕೇಸ್ ದಾಖಲಿಸಿದ್ದ ಅಧಿಕಾರಿಗಳಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಮತ್ತು ನಮಾಝ್ ವಿಡಿಯೋವನ್ನು ಹರಿಯಬಿಟ್ಟು ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸಿದವರ ವಿರುದ್ಧಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು. ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದರು.
ದ.ಕ ಜಿಲ್ಲೆಯ ಮುಸ್ಲಿಂ ಮುಖಂಡರು ಈ ವಿಚಾರವನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಗೃಹ ಸಚಿವ ಪರಮೇಶ್ವರ್, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ಸ್ಪೀಕರ್ ಯು.ಟಿ ಖಾದರ್ ಅವರ ಗಮನಕ್ಕೆ ತಂದು ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸಿದ್ದರು. ಇದೇ ವಿಚಾರವಾಗಿ ಸ್ಪೀಕರ್ ಯು.ಟಿ ಖಾದರ್ ಅವರು ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಿದ್ದರು ಎಂದು ತಿಳಿದುಬಂದಿದೆ.


ಅದರ ಬೆನ್ನಲ್ಲೇ ರಾಜ್ಯ ಸರ್ಕಾರ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಕೆಲವು ಮಹತ್ವದ ಸಲಹೆ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆಯೂ ಸೂಚನೆ ಕೊಟ್ಟಿದೆ ಎಂದು ತಿಳಿದುಬಂದಿದೆ.



Join Whatsapp