ಸಿದ್ದರಾಮಯ್ಯ ನೂತನ ಮುಖ್ಯಮಂತ್ರಿ; ಡಿಕೆಶಿಗೆ ಡಿಸಿಎಂ: ಎಐಸಿಸಿಯಿಂದ ಅಧಿಕೃತ ಘೋಷಣೆ

Prasthutha|

ಬೆಂಗಳೂರು: ಕೊನೆಗೂ ಕರ್ನಾಟಕದ ಮುಖ್ಯಮಂತ್ರಿ ಹುದ್ದೆ ಸಿದ್ದರಾಮಯ್ಯ ಅವರಿಗೆ ಒಲಿದಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿ, ಡಿಕೆ ಶಿವಕುಮಾರ್ ಉಪಮುಖ್ಯಮಂತ್ರಿ ಎಂದು ಕಾಂಗ್ರೆಸ್ ಹೈಕಮಾಂಡ್ ಇಂದು (ಮೇ 18) ಅಧಿಕೃತ ಘೋಷಣೆ ಮಾಡಿದೆ.

- Advertisement -

ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣು ಗೋಪಾಲ್, ಸಿದ್ದರಾಮಯ್ಯ ಮುಖ್ಯಮಂತ್ರಿ, ಡಿಕೆ ಶಿವಕುಮಾರ್ ಉಪಮುಖ್ಯಮಂತ್ರಿ ಎಂದು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಮೇ 20ರಂದು (ಶನಿವಾರ) ಮಧ್ಯಾಹ್ನ 12:30ಕ್ಕೆ ನೂತನ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ಜೊತೆಗೆ ಕೆಲವು ಸಚಿವರು ಕೂಡ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದರು.

ಲೋಕಸಭೆ ಚುನಾವಣೆ ವರೆಗೂ ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಅವರೇ ಮುಂದುವರಿಯಲಿದ್ದಾರೆ ಎಂದು ವೇಣುಗೋಪಾಲ್ ತಿಳಿಸಿದರು.

- Advertisement -

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಪಕ್ಷದ ಎಲ್ಲಾ ಹಿರಿಯ ನಾಯಕರ ಜತೆ ಚರ್ಚೆ ಮಾಡಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ಅಭಿಪ್ರಾಯ ಪಡೆದು ಸಿದ್ದರಾಮಯ್ಯ ಅವರನ್ನು ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಹಾಗೂ ಡಿ.ಕೆ. ಶಿವಕುಮಾರ್ ಅವರನ್ನು ರಾಜ್ಯದ ಏಕೈಕ ಉಪಮುಖ್ಯಮಂತ್ರಿಯಾಗಿ ಹಾಗೂ ಮುಂಬರುವ ಲೋಕಸಭಾ ಚುನಾವಣೆವರೆಗೂ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಸಲು ತೀರ್ಮಾನಿಸಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

ಈ ಚುನಾವಣೆ ರಾಜ್ಯದ ಬಡವರು ಹಾಗೂ ಶ್ರೀಮಂತರ ನಡುವಣ ಚುನಾವಣೆ ಆಗಿತ್ತು.  ಹೀಗಾಗಿ ರಾಜ್ಯದ ಬದ ಹಾಗೂ ಮಾಧ್ಯಮ ವರ್ಗದ ಜನ ಕಾಂಗ್ರೆಸ್ ಪಕ್ಷದ ಪರವಾಗಿ ನಿಂತಿದ್ದಾರೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ನಮ್ಮ ಪಕ್ಷದ ಎಲ್ಲಾ ನಾಯಕರು ಬಹಳ ಕಠಿಣ ಶ್ರಮವಹಿಸಿದ್ದಾರೆ.

ನಮ್ಮ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಒಂದು ತಿಂಗಳ ಕಾಲ ಪ್ರಚಾರದಲ್ಲಿ ನಿರಂತರವಾಗಿ ಭಾಗವಹಿಸಿ ನಮಗೆ ಮಾರ್ಗದರ್ಶನ ನೀಡಿದ್ದರು. ಭಾರತ ಜೋಡೋ ಯಾತ್ರೆ ಮೂಲಕ ಕಾಂಗ್ರೆಸ್ ಪಕ್ಷದ ಪ್ರಚಾರ ಆರಂಭವಾಗಿ, ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತುಂಬಲಾಗಿತ್ತು. ಹೀಗಾಗಿ ನಾನು ರಾಹುಲ್ ಗಾಂಧಿಗೆ ಧನ್ಯವಾದ ಅರ್ಪಿಸುತ್ತೇನೆ.

ಪ್ರಿಯಾಂಕಾ ಗಾಂಧಿ ಅವರು ಕೂಡ ನಿರಂತರ ಪ್ರಚಾರ ಮಾಡಿದ್ದು, ಅವರ ಸಭೆಗಳು ಜನಪ್ರಿಯವಾಗಿದ್ದವು. ಇನ್ನು ಸೋನಿಯಾ ಗಾಂಧಿ ಅವರ ಉಪಸ್ಥಿತಿ ಹಾಗೂ ಮಾರ್ಗದರ್ಶನ ಪಕ್ಷದ ಕಾರ್ಯಕರ್ತರಲ್ಲಿ ಶಕ್ತಿ ತುಂಬಿತು.

ಮೇ 13ರಂದು ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಕ್ಕಿದ್ದು, 14ರಂದು ಕಾಂಗ್ರೆಸ್ ಶಾಸಕಾಂಗ ಸಭೆ ನಡೆದಿತ್ತು. ಅಧ್ಯಕ್ಷರು ಮೂವರು ವೀಕ್ಷಕರನ್ನು ಕಳುಹಿಸಿ ಶಾಸಕರ ಅಭಿಪ್ರಾಯ ಸಂಗ್ರಹಿಸಿದರು.

ನಮ್ಮ ಪ್ರಜಾಪ್ರಭುತ್ವ ಪಕ್ಷವಾಗಿದ್ದು, ನಮ್ಮ ಪಕ್ಷದಲ್ಲಿ ಸರ್ವಾಧಿಕಾರ ನಿರ್ಧಾರಕ್ಕೆ ಅವಕಾಶ ಇಲ್ಲ. ನಮ್ಮಲ್ಲಿ ಒಮ್ಮತದ ತೀರ್ಮಾನಕ್ಕೆ ಪ್ರಯತ್ನ ಮಾಡಲಾಗಿತ್ತು. ಕರ್ನಾಟಕ ರಾಜ್ಯದಲ್ಲಿ ನಮ್ಮ ಪಕ್ಷದಲ್ಲಿ ಅನೇಕ ದೊಡ್ದ ದೊಡ್ದ ನಾಯಕರು ಇದ್ದಾರೆ.

ಸಿದ್ದರಾಮಯ್ಯ ಅವರ ಅನುಭವ, ಆಡಳಿತ ಶೈಲಿ ಹೊಂದಿದ್ದು, ಚುನಾವಣೆಯಲ್ಲಿ ಪಕ್ಷಕ್ಕೆ ಪರಿಶ್ರಮ ಹಾಕಿ ಪ್ರಚಾರ ಮಾಡಿದ್ದಾರೆ. ನಮ್ಮ  ಪಕ್ಷದ ಅತ್ಯಂತ ಪ್ರಬಲ ಸಂಘಟನಾಕಾರ ಡಿ.ಕೆ. ಶಿವಕುಮಾರ್, ರಾಜ್ಯದ ಕಾಂಗ್ರೆಸ್ ಕಾರ್ಯಕರ್ತರಿಗೆ ಶಕ್ತಿ ತುಂಬಿದ್ದಾರೆ. ತಳಹಂತದವರೆಗೆ ತಲುಪಿ ಪಕ್ಷ ಸಂಘಟಿಸಿದ್ದರು. ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ ಅವರ ಜೋಡಿ ಅತ್ಯುತ್ತಮ ಜೋಡಿಯಾಗಿದ್ದು, ಇಬ್ಬರೂ ಕಾಂಗ್ರೆಸ್ ಪಕ್ಷದ ಶಕ್ತಿ ಆಗಿದ್ದಾರೆ. ಇವರಿಬ್ಬರೂ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹರು. ಹೀಗಾಗಿ ಕಾಂಗ್ರೆಸ್ ಅಧ್ಯಕ್ಷರು ಈ ವಿಚಾರವಾಗಿ ಇಬ್ಬರೂ ನಾಯಕರ ಜತೆ ಪ್ರತ್ಯೇಕವಾಗಿ ಹಲವು ಸಭೆ ನಡೆಸಿದ್ದಾರೆ. ಇನ್ನು ಹಿರಿಯ ನಾಯಕರ ಜತೆಯೂ ಚರ್ಚೆ ಮಾಡಿದ್ದಾರೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅವರ ಅಭಿಪ್ರಾಯ ಸಂಗ್ರಹಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕ ರಾಜ್ಯದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಶ್ರೀಯುತ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ್ದಾರೆ ಎಂದು ವೇಣುಗೋಪಾಲ್ ಹೇಳಿದರು.

ಡಿ.ಕೆ. ಶಿವಕುಮಾರ್ ಅವರು ರಾಜ್ಯದ ರಾಜ್ಯದ ಏಕೈಕ  ಉಪಮುಖ್ಯಮಂತ್ರಿ ಆಗಿ ಆಯ್ಕೆ ಆಗಿದ್ದು, ಲೋಕಸಭೆ ಚುನಾವಣೆ ಮುಕ್ತಾಯದವರೆಗೂ ಕರ್ನಾಟಕ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ.

ಇದರೊಂದಿಗೆ ಕಳೆದ ನಾಲ್ಕೈದು ದಿನಗಳಿಂದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ನಡೆಯುತ್ತಿದ್ದ ಹಗ್ಗಜಗ್ಗಾಟ ಕೊನೆಯಾದಂತಾಗಿದೆ. ಇನ್ನು ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಮೇ.20ರಂದು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹೈಕಮಾಂಡ್ ಸರಣಿ ಸಭೆಗಳನ್ನು ಮಾಡುವ ಮೂಲಕ ಮುಂದಿನ ಲೋಕಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಅಂತಿಮವಾಗಿ ಸಿದ್ದರಾಮಯ್ಯನವರನ್ನು ಆಯ್ಕೆ ಮಾಡಿದೆ. ಇದರೊಂದಿಗೆ ಕರ್ನಾಟಕ ಸಿಎಂ ಯಾರಾಗುತ್ತಾರೆ ಎನ್ನುವ ಪ್ರಶ್ನೆಗೆ ಇಂದು ತೆರೆ ಬಿದ್ದಿದೆ.

Join Whatsapp