ಬೆಂಗಳೂರು : ಜ್ವರದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸಂಪೂರ್ಣ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆಸ್ಪತ್ರೆಯಿಂದ ಹೊರಟ ಸಿದ್ದರಾಮಯ್ಯ ಅವರನ್ನು ವೈದ್ಯರು ಹಾಗೂ ಸಿಬ್ಬಂದಿ ಬೀಳ್ಕೊಟ್ಟರು.
ಮಂಗಳವಾರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದು, ಕೋವಿಡ್ ಪರೀಕ್ಷೆಯಲ್ಲಿ ಫಲಿತಾಂಶ ನೆಗೆಟಿವ್ ಬಂದಿದ್ದರೂ ಮುನ್ನೆಚ್ಚರಿಕೆ ಕ್ರಮವಾಗಿ ಇನ್ನೂ ಎರಡು ದಿನ ಆಸ್ಪತ್ರೆಯಲ್ಲೇ ಉಳಿಯಲು ವೈದ್ಯರು ಸಲಹೆ ನೀಡಿದ್ದರು. ಶನಿವಾರ ಡಿಸ್ಚಾರ್ಚ್ ಆಗಬೇಕಿದ್ದ ಸಿದ್ದರಾಮಯ್ಯ ನಿನ್ನೆಯವರೆಗೂ ಆಸ್ಪತ್ರೆಯಲ್ಲೇ ಉಳಿದಿದ್ದು, ಇಂದು ಬೆಳಗ್ಗೆ ಮನೆಗೆ ಮರಳಿದ್ದಾರೆ.
ಸದ್ಯಕ್ಕೆ ಸಾರ್ವಜನಿಕವಾಗಿ ಕಾಣಿಸಿಕೊಳ್ಳದೆ ಮತ್ತಷ್ಟು ದಿನ ಮನೆಯಲ್ಲೆ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ.