ಅಧಿಕಾರ ಉಳಿಸಿಕೊಳ್ಳಲು ಕನ್ನಡಿಗರ ಸ್ವಾಭಿಮಾನವನ್ನು ‘ಉತ್ತರ ಕುಮಾರ’ರ ಕಾಲಡಿ ಯಾಕೆ ಅಡವು ಇಡುತ್ತೀರಾ?: ಹಿಂದಿ ಹೇರಿಕೆಗೆ ಸಿದ್ದರಾಮಯ್ಯ ಗರಂ

Prasthutha|

►ಕನ್ನಡ -ಸಂಸ್ಕೃತಿ ಇಲಾಖೆ ಜಾಲತಾಣದಿಂದ ಹಿಂದಿಯನ್ನು ಕಿತ್ತೊಗೆದು, ಕನ್ನಡಿಗರ ಸ್ವಾಭಿಮಾನ ಉಳಿಸಿ

- Advertisement -

ಬೆಂಗಳೂರು: ರಾಜ್ಯದ ಬೊಮ್ಮಾಯಿ ಸರ್ಕಾರ ಕೇಂದ್ರದ ಬಿಜೆಪಿ ನಾಯಕರ ಓಲೈಕೆಗಾಗಿ ಮತ್ತೆ ಮತ್ತೆ ಕನ್ನಡವನ್ನು ತುಳಿದು ಹಿಂದಿಯನ್ನು ಮೆರೆಸಿ ಕನ್ನಡ-ಕನ್ನಡಿಗ-ಕರ್ನಾಟಕಕ್ಕೆ ಅವಮಾನ ಮಾಡುತ್ತಿರುವುದು ಖಂಡನೀಯ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಅವರು, ಕೇಂದ್ರ ಸಚಿವ ಅಮಿತ್ ಶಾ ಅವರು ಭಾಗವಹಿಸಿದ್ದ ‘ ಸಂಕಲ್ಪ್ ಸೆ ಸಿದ್ಧಿ’ ಎಂಬ ಕಾರ್ಯಕ್ರಮದ ಬ್ಯಾನರ್ ಸಂಪೂರ್ಣ ಹಿಂದಿಮಯವಾಗಿತ್ತು. ಇನ್ನೊಂದೆಡೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತನ್ನ ಜಾಲತಾಣದಲ್ಲಿ ಹಿಂದಿಯ ಕಿರೀಟ ಇಟ್ಟುಕೊಂಡು ಮೆರೆಸುತ್ತಿದೆ. ರಾಜ್ಯದ ಬಿಜೆಪಿ ಸರ್ಕಾರ ತನ್ನತನವನ್ನು ಅಡವಿಟ್ಟು ಹಿಂದಿ ಭಾಷೆಗೆ ಸಂಪೂರ್ಣ ಶರಣಾಗತವಾಗಿದೆ ಎಂಬುದಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಾಲತಾಣವೇ ಸಾಕ್ಷಿ. ಮೊದಲು ಈ ಜಾಲತಾಣದಿಂದ ಹಿಂದಿಯನ್ನು ಕಿತ್ತೊಗೆದು, ಕನ್ನಡಿಗರ ಸ್ವಾಭಿಮಾನ ಉಳಿಸಿ ಎಂದು ಆಗ್ರಹಿಸಿದ್ದಾರೆ.

- Advertisement -

ರಾಜ್ಯದಲ್ಲಿರುವುದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯೇ? ಅಥವಾ ಹಿಂದಿ ಮತ್ತು ಸಂಸ್ಕೃತಿ ಇಲಾಖೆಯೇ? ಎನ್ನುವುದನ್ನು  ಮುಖ್ಯಮಂತ್ರಿ ಅವರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಸುನೀಲ್ ಕುಮಾರ್ ಅವರು ಸ್ಪಷ್ಟಪಡಿಸಬೇಕು. ಕನ್ನಡ ಮತ್ತು ಸಂಸ್ಕೃತಿಯ ರಕ್ಷಣೆ ಮತ್ತು ಪೋಷಣೆಗಾಗಿ ಇರುವ ಇಲಾಖೆಯೇ ಎರಡು ಸಾವಿರ ವರ್ಷಗಳ ಇತಿಹಾಸವಿರುವ ಕನ್ನಡವನ್ನು ಹೊರಗಿಟ್ಟು ಹಿಂದಿ ಭಾಷೆಯ ಪ್ರಚಾರಕ್ಕೆ ಇಳಿದರೆ ಕನ್ನಡ ಭಾಷೆಯನ್ನು ರಕ್ಷಿಸಿವವರು ಯಾರು ಸುನೀಲ್ ಕುಮಾರ್ ಅವರೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಅಧಿಕಾರ ಉಳಿಸಿಕೊಳ್ಳುವ ಸಲುವಾಗಿ ಕನ್ನಡಿಗರ ಸ್ವಾಭಿಮಾನವನ್ನು ‘ಉತ್ತರ ಕುಮಾರ’ರ ಕಾಲಡಿ ಯಾಕೆ ಅಡವು ಇಡುತ್ತೀರಾ? ಶರಣಾಗತಿ ಕನ್ನಡದ ಮಣ್ಣಿನ ಗುಣವಲ್ಲ, ವೀರರಾಣಿ ಅಬ್ಬಕ್ಕನ ನೆಲದಿಂದ ಬಂದ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್ ಕುಮಾರ್ ಅವರಿಗೆ ಇಂಥಾ ಗುಲಾಮಿ ಮನಸ್ಥಿತಿ ಬರಬಾರದಿತ್ತು..!! ಎಂದು ಸಿದ್ದರಾಮಯ್ಯ ಕುಟುಕಿದ್ದಾರೆ.

Join Whatsapp