ಹೊಸದಿಲ್ಲಿ: ಕಾಂಗ್ರೆಸ್ ಹೈಕಮಾಂಡ್ ಬುಲಾವ್ ಮೇರೆಗೆ ನಿನ್ನೆ (ಆಗಸ್ಟ್ 02) ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಆಗಸ್ಟ್ 03) ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ.
ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಭೇಟಿಗೆ ಸಮಯ ಸಿಕ್ಕಿದ್ದು, ವಿವಿಧ ಯೋಜನೆಗಳಡಿ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಬಾಕಿ ಅನುದಾನ ಬಿಡುಗಡೆ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಅವರು ಎರಡನೇ ಸಲ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿಯವರನ್ನು ಭೇಟಿಯಾಗುತ್ತಿರುವುದು ಕುತೂಹಲ ಮೂಡಿಸಿದೆ.
ಕೇವಲ ಪ್ರಧಾನಿ ನರೇಂದ್ರ ಮೋದಿ ಮಾತ್ರವಲ್ಲದೇ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಸಹ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.
ಪೂರ್ತಿ ಜಿಎಸ್‌ಟಿ ಅನುದಾನ ಬಿಡುಗಡೆ ಮಾಡುವ ಬಗ್ಗೆ ನಿರ್ಮಲಾ ಸೀತಾರಾಮನ್ ಅವರ ಜೊತೆ ಮಾತುಕತೆ ನಡೆಸುವ ಸಾಧ್ಯತೆ ಇದ್ದು, ರಾಜ್ಯದಲ್ಲಿ ಹೆದ್ದಾರಿಗಳ ಅಭಿವೃದ್ಧಿ, ಹೊಸ ಹೆದ್ದಾರಿಗಳ ಬಗ್ಗೆ ನಿತಿನ್ ಗಡ್ಕರಿ ಜೊತೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.