ಶಿರೂರು ಗುಡ್ಡ ಕುಸಿದ ಸ್ಥಳಕ್ಕೆ ಸಿದ್ದರಾಮಯ್ಯ ಭೇಟಿ

Prasthutha|

- Advertisement -

ಜೀವದ ಹಂಗು ತೊರೆದು ಕಾರ್ಯಾಚರಣೆ ನಡೆಸುತ್ತಿರುವ ಸಿಬ್ಬಂದಿಯ ಕಾರ್ಯಕ್ಷಮತೆಗೆ ಸಿಎಂ ಶ್ಲಾಘನೆ

ಉತ್ತರ ಕನ್ನಡ: ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿದ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಮಳೆಯಲ್ಲೇ ಭೇಟಿ ನೀಡಿದ್ದು, SDRF ಹಾಗೂ NDRF ಸಿಬ್ಬಂದಿಗೆ ಎದುರಾಗುತ್ತಿರುವ ಸವಾಲುಗಳನ್ನು ಪರಿಶೀಲನೆ ಮಾಡಿದ್ದಾರೆ.

- Advertisement -

ಅತ್ಯಂತ ಅಪಾಯಕಾರಿ ಸನ್ನಿವೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ SDRF ಮತ್ತು NDRF ತಂಡಗಳ ಜೊತೆ ಚರ್ಚೆ ನಡೆಸಿದ ಮುಖ್ಯಮಂತ್ರಿಗಳು ಸಿಬ್ಬಂದಿಯ ಕಾರ್ಯಕ್ಷಮತೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಗುಡ್ಡ ಕುಸಿತದಿಂದ ಮುಚ್ಚಿ ಹೋಗಿರುವ ರಸ್ತೆಯ ಎಡಭಾಗದಲ್ಲಿ ಕುಸಿತದ ಗುಡ್ಡ-ಬಲ ಭಾಗದಲ್ಲಿ ಭೋರ್ಗರೆದು ಹರಿಯುತ್ತಿರುವ ಕಾಳಿ ನದಿ ಇದೆ. ಜೊತೆಗೆ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಲ್ಲಿ ಮಣ್ಣಿನಡಿ ಸಿಲುಕಿರುವ ಜೀವಗಳ ಪತ್ತೆ ಕಾರ್ಯ ಬಹಳ ಸವಾಲಿನದ್ದಾಗಿದೆ ಎಂದು ಮುಖ್ಯಮಂತ್ರಿಗಳು ಸಿಬ್ಬಂದಿಯ ಶ್ರಮಕ್ಕೆ ಮೆಚ್ಚುಗೆ ಸೂಚಿಸಿದರು.

ನಾಲ್ಕು ತಂಡಗಳು ಗುಡ್ಡ ಕುಸಿತದ ಕೆಳಗೆ ಸಿಲುಕಿರಬಹುದಾದವರ ಪತ್ತೆಗೆ ರಾಡಾರ್ ತಂತ್ರಜ್ಞಾನ ಬಳಸಿ ಕಾರ್ಯಾಚರಣೆ ನಡೆಸುತ್ತಿವೆ. ಇನ್ನು ನಾಲ್ಕು ತಂಡಗಳು ಮತ್ತೊಂದು ಬದಿಯ ನದಿಯೊಳಗೆ ಕಾರ್ಯಾಚರಣೆ ನಡೆಸುತ್ತಿವೆ. ಈ ಬಗ್ಗೆ ಹಲವು ದಿನಗಳಿಂದ ತಾಲ್ಲೂಕಿನಲ್ಲೇ ಮೊಕ್ಕಾಂ ಹೂಡಿರುವ ಕಂದಾಯ ಸಚಿವ ಕೃಷ್ಣಬೈರೇಗೌಡರು ಮುಖ್ಯಮಂತ್ರಿಗಳಿಗೆ ವಿವರಿಸಿದರು.



Join Whatsapp