ಬೆಂಗಳೂರು: ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರೆ, ಅವರು ಮಾಡಿದ ಪಾಪ ಅವರನ್ನು ಸುಮ್ಮನೆ ಬಿಡಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆದ ಬಿಜೆಪಿ ಮಹಿಳಾ ಮೋರ್ಚಾದ ರಾಜ್ಯ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯದ ಜನರು ಈ ಸರ್ಕಾರಕ್ಕೆ ಶಾಪ ಹಾಕುತ್ತಿದ್ದಾರೆ. ವಿಪಕ್ಷವಾಗಿದ್ದಾಗ ಹೋರಾಟಗಳು ಅನಿವಾರ್ಯ, ಚುನಾವಣೆ ಬಂದಾಗ ಮಾತ್ರ ಹೋರಾಟ ಮಾಡಿದರೆ ಅದು ಜನತೆಗೆ ಮಾಡಿದ ಅವಮಾನ ಮತ್ತು ಅನ್ಯಾಯ. ರಾಜ್ಯದ ಚುಕ್ಕಾಣಿ ಹಿಡಿದ ಸರ್ಕಾರ ಜನವಿರೋಧಿ ನೀತಿಗಳನ್ನು ಅನುಸರಿಸುತ್ತದೋ ಆಗ, ರಾಜ್ಯದ ಜನರ ಪರವಾಗಿ ಹೋರಾಡುವುದು ನಮ್ಮ ಕರ್ತವ್ಯ ಎಂದು ಅವರು ಹೇಳಿದ್ದಾರೆ.
ದುಷ್ಟ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮಹಿಳೆಯರ ಮೇಲೆ ನಿರಂತರವಾಗಿ ದೌರ್ಜನ್ಯ ಹೆಚ್ಚಾಗಿದೆ. ರಾಜ್ಯದಲ್ಲಿ ವಾಲ್ಮೀಕಿ ನಿಗಮದ ಹಗರಣ, ಮುಡಾ ಹಗರಣದ ವಿರುದ್ಧ ಹೋರಾಟಗಳು ನಡೆದಿವೆ. ಮಹಿಳೆಯರ ಮೇಲಿನ ದೌರ್ಜನ್ಯದ ಸಂದರ್ಭದಲ್ಲಿ ಮುಖ್ಯಮಂತ್ರಿ, ಗೃಹ ಸಚಿವ, ಸಚಿವರ ನಡವಳಿಕೆ ಪ್ರಮುಖವಾಗುತ್ತದೆ ಎಂದಿದ್ದಾರೆ.