ಬೆಂಗಳೂರು: ಬಾದಾಮಿ ವಿಧಾನಸಭೆ ಕ್ಷೇತ್ರದ ಗುಳೇದಗುಡ್ಡದಲ್ಲಿ ಜವಳಿ ಪಾರ್ಕ್ ಸ್ಥಾಪನೆಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.
ಕ್ಷೇತ್ರದ ಶಾಸಕರೂ ಆಗಿರುವ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕೋರಿಕೆ ಮೇರೆಗೆ ಸರ್ಕಾರ ಜವಳಿ ಪಾರ್ಕ್ ಯೋಜನೆಯನ್ನು ಬಜೆಟ್ ನಲ್ಲಿ ಘೋಷಿಸಿತ್ತು. ಇದೀಗ ಆಡಳಿತಾತ್ಮಕ ಅನುಮೋದನೆ ದೊರೆತಿರುವುದರಿಂದ ಮಹತ್ವದ ಯೋಜನೆಯ ಕಾರ್ಯಾರಂಭಕ್ಕೆ ಹಸಿರು ನಿಶಾನೆ ಸಿಕ್ಕಂತಾಗಿದೆ.
ಗುಳೇದಗುಡ್ಡದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಇರುವ ನೇಕಾರರ ಅನುಕೂಲಕ್ಕಾಗಿ ಹಾಗೂ ಸ್ಥಳೀಯವಾಗಿ ಉದ್ಯೋಗ ಅವಕಾಶಗಳನ್ನು ಒದಗಿಸಲು ಜವಳಿ ಪಾರ್ಕ್ ಸ್ಥಾಪಿಸುವಂತೆ ಸಿದ್ದರಾಮಯ್ಯ ಅವರು ಸರ್ಕಾರಕ್ಕೆ ಪತ್ರ ಮೂಲಕ ಮನವಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಸರ್ಕಾರ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಜವಳಿ ಪಾರ್ಕ್ ಸ್ಥಾಪಿಸಲು ಅನುಮತಿ ನೀಡಿ ಘೋಷಣೆ ಹೊರಡಿಸಿದೆ. ಸರ್ಕಾರದ ಈ ನಿರ್ಧಾರಕ್ಕೆ ಗುಳೇದಗುಡ್ಡದ ಜನತೆ ಹರ್ಷ ವ್ಯಕ್ತಪಡಿಸಿದ್ದು ಸಿದ್ದರಾಮಯ್ಯ ಅವರಿಗೆ ತಮ್ಮ ಕೃತಜ್ಞತೆ ಸಲ್ಲಿಸಿದ್ದಾರೆ.