ಬೆಂಗಳೂರು ; ವಿಜಯಪುರ ಜಿಲ್ಲೆಯ ಸಿಂಧಗಿ ಹಾಗೂ ಹಾವೇರಿ ಜಿಲ್ಲೆ ಹಾನಗಲ್ ವಿಧಾನಸಭೆಯ ಉಪಚುನಾವಣೆಗೆ ನಾಳೆ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಲಿದ್ದು, ಚುನಾವಣಾ ಪ್ರಕ್ರಿಯೆಗೆ ಸಕಲ ಸಿದ್ಧತೆ ಪೂರ್ಣಗೊಂಡಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ತಿಳಿಸಿದೆ.
ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ 98 ಸಾವಿರದ 798 ಮಹಿಳೆಯರು ಸೇರಿದಂತೆ 2 ಲಕ್ಷ 42 ಸಾವಿರದ 89 ಮತದಾರರು ಮತದಾನದ ಅರ್ಹತೆ ಹೊಂದಿದ್ದಾರೆ. ಈಗಾಗಲೇ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದ್ದು, 239 ಮತಗಟ್ಟೆಗಳ ಜತೆಗೆ ಹೆಚ್ಚುವರಿಯಾಗಿ 24 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಪ್ರತಿ ಮತಗಟ್ಟೆಗೆ 4 ಸಿಬ್ಬಂದಿಯಂತೆ ಒಂದು ಸಾವಿರದ 52 ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಮುಕ್ತ ಹಾಗೂ ಶಾಂತಿಯುತ ಮತದಾನಕ್ಕಾಗಿ ಭದ್ರತಾ ವ್ಯವಸ್ಥೆ ಚುರುಕುಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ವಿಜಯಪುರದ ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2 ಲಕ್ಷ 34 ಸಾವಿರದ 584 ಮತದಾರರು ತಮ್ಮ ಹಕ್ಕನ್ನು ಚಲಾಯಿಸಲಿದ್ದಾರೆ. 297 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಒಂದು ಸಾವಿರದ 308 ಸಿಬ್ಬಂದಿಯನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾಗಿದೆ. ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಮತಗಟ್ಟೆಗಳಿಗೆ ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ನಾಳೆ ಬೆಳಗ್ಗೆ 7 ಗಂಟೆಯಿಂದ ಸಂಜೆ 6ಗಂಟೆವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ನವೆಂಬರ್ 2ರಂದು ತಾಲೂಕು ಕೇಂದ್ರಗಳಲ್ಲಿ ಮತಗಳ ಎಣಿಕೆ ನಡೆಯಲಿದ್ದು, ಅಂದೇ ಫಲಿತಾಂಶ ಹೊರಬೀಳಲಿದೆ.