ಬೆಳಗಾವಿ: ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಎಚ್.ಕಾಂತರಾಜ ಅವರ ನೇತೃತ್ವದಲ್ಲಿ ಹಿಂದುಳಿದ ವರ್ಗಗಳ ಆಯೋಗವು ನಡೆಸಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2015 ವರದಿಯನ್ನು ಶೀಘ್ರವೇ ಬಿಡುಗಡೆ ಮಾಡುವುದಾಗಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ವಿಧಾನಪರಿಷತ್ತಿಗಿಂದು ತಿಳಿಸಿದರು.
ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಕೆ.ಪಿ.ನಂಜುಂಡಿ ವಿಶ್ವಕರ್ಮ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿಗೆ ಸದಸ್ಯ ಕಾರ್ಯದರ್ಶಿ ಸಹಿ ಇರದ ಕಾರಣ ಸರ್ಕಾರದಿಂದ ವರದಿಯನ್ನು ಹಿಂದುಳಿದ ವರ್ಗಗಳ ಆಯೋಗಕ್ಕೆ ರವಾನಿಸಲಾಗಿತ್ತು. ಸರ್ಕಾರ ಹೊಸದಾಗಿ ಹಿಂದುಳಿದ ವರ್ಗಗಳ ಆಯೋಗಕ್ಕೆ ಜಯಪ್ರಕಾಶ್ ಹೆಗ್ಡೆಯವರನ್ನು ಅಧ್ಯಕ್ಷರನ್ನಾಗಿ ನೇಮಿಸಿದೆ. ಆಯೋಗ ಸಮೀಕ್ಷಾ ವರದಿಯನ್ನು ಪರಿಶೀಲಿಸಿ ಪುನಃ ಸರ್ಕಾರಕ್ಕೆ ಸಲ್ಲಿಸಲಿದೆ. ತದ ನಂತರ ಸಮೀಕ್ಷಾ ವರದಿಯನ್ನು ಬಿಡುಗಡೆ ಮಾಡಲಾಗುವುದು ಎಂದರು.
ಸದಸ್ಯ ಕೆ.ಪಿ.ನಂಜುಂಡಿ ಮಾತನಾಡಿ, ಸರ್ಕಾರ .162 ಕೋಟಿ ವೆಚ್ಚ ಮಾಡಿ ರಾಜ್ಯದ 7 ಕೋಟಿ ಜನರ ಜಾತಿ ಆಧಾರಿತ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಸಿದೆ. ಕಳೆದ ಎರಡು ವರ್ಷಗಳಿಂದ ಸರ್ಕಾರ ಸಮೀಕ್ಷಾ ವರದಿ ಬಿಡುಗಡೆ ಕುರಿತು ಸದನದಲ್ಲಿ ಕೇಳಿದ ಪ್ರಶ್ನೆಗೆ ಒಂದೇ ರೀತಿಯ ಉತ್ತರ ನೀಡುತ್ತಿದೆ. ರಾಜ್ಯದಲ್ಲಿ ಹಿಂದುಳಿದ ವರ್ಗಗಳಿಗೆ ಸೇರಿದ 197 ಜಾತಿಗಳಿವೆ. ಇವರ ಜನಸಂಖ್ಯೆ ಬಗ್ಗೆ ನಿಖರ ಮಾಹಿತಿ ಇಲ್ಲ. ಇದರಿಂದಾಗಿ ಸರ್ಕಾರ ಈ ಸಮುದಾಯಗಳಿಗೆ ಯೋಜನೆ ರೂಪಿಸಲು ಸಾಧ್ಯವಾಗುತ್ತಿಲ್ಲ. ಕುಲಸುಬುಗಳನ್ನೇ ನಂಬಿಕೊಂಡಿರುವ ವಿಶ್ವಕರ್ಮಕ್ಕೆ ಸೇರಿದ ಸಮುದಾಯಗಳು ಸೇರಿದಂತೆ ಇತರೆ ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗುತ್ತಿದೆ. ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ಸರ್ಕಾರ ಆದಷ್ಟು ಶೀಘ್ರವಾಗಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಮಾತನಾಡಿ, ಕುಲಕಸುಬುಗಳನ್ನು ಮಾಡುವ ಹಿಂದುಳಿದ ವರ್ಗಗಳಿಗೆ ಸೇರಿದ ಜಾತಿ, ಸಮುದಾಯಗಳು ರಾಜ್ಯದ ಆರ್ಥಿಕತೆಗೆ ಕೊಡುಗೆ ನೀಡುತ್ತಿವೆ. ಶೈಕ್ಷಣಿಕವಾಗಿ ಹಿಂದುಳಿದಿರುವ ಈ ಸಮುದಾಯಗಳಿಗೆ ಸರ್ಕಾರ ವಿಶೇಷ ಯೋಜನೆ ರೂಪಿಸಲು ಸಮೀಕ್ಷಾ ವರದಿ ಆಧಾರವಾಗಲಿದೆ. ಸರ್ಕಾರ ವರದಿ ಬಿಡುಗಡೆ ಕ್ರಮ ಕೈಗೊಳ್ಳಬೇಕು ಎಂದರು.