ಬೆಂಗಳೂರು: ಅಪಘಾತಕ್ಕೆ ಕಾರಣವಾಗಿರುವ ಪ್ರಖರ ಬೆಳಕು ಹೊರಸೂಸುವ ಮತ್ತು ಕಣ್ಣು ಕುಕ್ಕುವ ಎಲ್ಇಡಿ ದೀಪ ಅಳವಡಿಸಿಕೊಂಡಿರುವ ವಾಹನಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಈಗ ಮತ್ತೊಂದು ಕಾರ್ಯಾಚರಣೆಗೆ ಪೊಲೀಸ್ ಇಲಾಖೆಗೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ( ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗ) ಅಲೋಕ್ ಕುಮಾರ್ ಅವರು ಸೂಚಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ ಮಾಡುವುದು ಪ್ರಯಾಣಿಕರ ಜೀವಕ್ಕೆ ಅಪಾಯ ತಂದೊಡ್ಡುತ್ತಿದೆ. ಹೆದ್ದಾರಿಗಳಲ್ಲಿ ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ ಮಾಡುವವರ ಮೇಲೆ ಬಿಎನ್ಎಸ್ ಸೆಕ್ಷನ್ 281 ಹಾಗೂ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 184ರ ಅಡಿ ಎಫ್ಐಆರ್ ದಾಖಲು ಮಾಡಿಕೊಳ್ಳುವಂತೆ ಅವರು ಸೂಚನೆ ನೀಡಿದ್ಧಾರೆ.
ಬೆಂಗಳೂರು ಮತ್ತು ಇತರೆ ನಗರಗಳಲ್ಲಿ ವಿರುದ್ಧ ದಿಕ್ಕಿನಲ್ಲಿ ಸಂಚರಿಸುವುದು ಹಾಗೂ ಪಾದಚಾರಿ ಮಾರ್ಗದಲ್ಲಿ ದ್ವಿಚಕ್ರ ವಾಹನ ಚಾಲನೆ ಮಾಡುವುದು ಸಾಮಾನ್ಯವಾಗಿದೆ. ಆಗಸ್ಟ್ 1ರಿಂದ ವಿಶೇಷ ಕಾರ್ಯಾಚರಣೆ ನಡೆಸಬೇಕು. ಕಾರ್ಯಾಚರಣೆಗೂ ಮೊದಲೇ ಸಾಮಾಜಿಕ ಜಾಲತಾಣ, ಕರಪತ್ರ, ಧ್ವನಿವರ್ಧಕ ಮೂಲಕ ಈ ಬಗ್ಗೆ ತಿಳಿವಳಿಕೆ ನೀಡಬೇಕು ಎಂದು ಇಲಾಖೆ ಅಧಿಕಾರಿಗಳಿಗೆ ಅಲೋಕ್ ಕುಮಾರ್ ಅವರು ಸೂಚಿಸಿದ್ದಾರೆ.