Home ಟಾಪ್ ಸುದ್ದಿಗಳು ಸುಸೂತ್ರವಾಗಿ ಮುಗಿದ SSLC ಪರೀಕ್ಷೆ ; ಮೇ 2ನೇ ವಾರ ಫಲಿತಾಂಶ: ಬಿ ಸಿ ನಾಗೇಶ್

ಸುಸೂತ್ರವಾಗಿ ಮುಗಿದ SSLC ಪರೀಕ್ಷೆ ; ಮೇ 2ನೇ ವಾರ ಫಲಿತಾಂಶ: ಬಿ ಸಿ ನಾಗೇಶ್

ವಿಜಯಪುರ: ರಾಜ್ಯದಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸುಸೂತ್ರವಾಗಿ ನಡೆದು ಮುಕ್ತಾಯಗೊಂಡಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು. ಆಲಮಟ್ಟಿಯಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ಮಾ. 28ರಿಂದ ಆರಂಭವಾದ ಪರೀಕ್ಷೆ ರಾಜ್ಯದಾದ್ಯಂತ ಸುಸೂತ್ರವಾಗಿ ನಡೆದು, ಮುಕ್ತಾಯವಾಗಿದೆ ಎಂದು ಹೇಳಿದ್ದಾರೆ.

ಒಂದು ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಅಕ್ರಮ ವರದಿಯಾಗಿದೆ. ಈ ಸಂಬಂಧ ಒಬ್ಬ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ. ಮೊದಲ ಬಾರಿ ಪರೀಕ್ಷೆ ಬರೆಯುತ್ತಿರುವವರಲ್ಲಿ ಹಾಜರಾತಿ ಪ್ರಮಾಣ ಶೇ.98ಕ್ಕಿಂತ ಹೆಚ್ಚಿದ್ದು, , ಖಾಸಗಿ ಅಭ್ಯರ್ಥಿಗಳು ಮತ್ತು ಪುನರಾವರ್ತಿತ ಅಭ್ಯರ್ಥಿಗಳ ಸಂಖ್ಯೆಯಲ್ಲಿ ಗೈರು ಹಾಜರಾತಿ ಪ್ರಮಾಣ ಎಂದಿನಂತೆ ಮುಂದುವರೆದಿದೆ’ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ನಾಳೆಯಿಂದ ಉತ್ತರಗಳು, ಉತ್ತರಗಳಿಗೆ ಆಕ್ಷೇಪಣೆ ಕರೆಯುವುದು ಸೇರಿದಂತೆ ಇನ್ನಿತರ ಪ್ರಕ್ರಿಯೆಗಳು ಆರಂಭವಾಗುತ್ತವೆ. ಏಪ್ರಿಲ್ ಕೊನೆಯ ವಾರದಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗುತ್ತದೆ. ಮೇ ಎರಡನೇ ವಾರದಲ್ಲಿ ಫಲಿತಾಂಶ ಪ್ರಕಟಿಸುವ ಗುರಿ ಹೊಂದಲಾಗಿದೆ. ಜೂನ್ 4ನೇ ವಾರದಲ್ಲಿ ಪೂರಕ ಪರೀಕ್ಷೆ ನಡೆಯಲಿದೆ’ ಎಂದು ಸಚಿವ ನಾಗೇಶ್ ತಿಳಿಸಿದ್ದಾರೆ.

ಸಮವಸ್ತ್ರ ವಿಚಾರವಾಗಿ ಶಾಲೆಗಳಲ್ಲಿ ಯಾವುದೇ ಗೊಂದಲ ಉಂಟಾಗಿಲ್ಲ. ವಿದ್ಯಾರ್ಥಿಗಳು ಸಮವಸ್ತ್ರದಲ್ಲಿ ಹಾಜರಾಗಿ ಪರೀಕ್ಷೆ ಬರೆದಿದ್ದಾರೆ. ಅನಾರೋಗ್ಯ ಲಕ್ಷಣಗಳು ಕಂಡು ಬಂದರೆ ಅಂತಹ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಪರೀಕ್ಷೆ ಬರೆಯಲು ಕೊಠಡಿ ವ್ಯವಸ್ಥೆ ಕಲ್ಪಿಸಲಾಗಿತ್ತು. ಪರೀಕ್ಷೆಯ ಅವಧಿಯಲ್ಲಿ ಯಾವೊಬ್ಬ ವಿದ್ಯಾರ್ಥಿಗೂ ಕೋವಿಡ್ ಪಾಸಿಟಿವ್ ಬಂದಿಲ್ಲ ಎಂದು ಬಿಸಿ ನಾಗೇಶ್ ಹೇಳಿದ್ದಾರೆ.

Join Whatsapp
Exit mobile version