ಮಡಿಕೇರಿ: ನಗರದ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಟಾಟಾ ಟೆಕ್ನಾಲಜೀಸ್ ಲಿಮಿಟೆಡ್ ಸಂಯೋಜನೆಯೊಂದಿಗೆ ಉನ್ನತೀಕರಿಸಿದ ತಾಂತ್ರಿಕ ಕೇಂದ್ರವನ್ನು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಸಮ್ಮುಖದಲ್ಲಿ ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ ಉದ್ಘಾಟನೆ ಮಾಡಿದರು.
ಸಮಾರಂಭದಲ್ಲಿ ಮಾತನಾಡಿದ ಅನಿತಾ ಪೂವಯ್ಯ, ಟಾಟಾ ಟೆಕ್ನಾಲಜೀಸ್ ಲಿಮಿಟೆಡ್ ಸಂಯೋಜನೆಯೊಂದಿಗೆ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಉನ್ನತೀಕರಿಸಿದ ತಾಂತ್ರಿಕ ಕೇಂದ್ರವನ್ನು ನಿರ್ಮಿಸಲಾಗಿದೆ. ಇದರ ಸದುಪಯೋಗವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕು. ವಿದ್ಯಾರ್ಥಿಗಳು ಒಂದು ನಿರ್ದಿಷ್ಟ ಗುರಿಯನ್ನು ಇಟ್ಟುಕೊಂಡು ಕಠಿಣ ಶ್ರಮ ಮತ್ತು ಪರಿಶ್ರಮದಿಂದ ದುಡಿದು ಸ್ವಉದ್ಯೋಗಿಗಳಾಗಿ ಮತ್ತೊಬ್ಬರಿಗೆ ಉದ್ಯೋಗ ನೀಡುವಂತಾಗಬೇಕು ಎಂದು ಹೇಳಿದರು.
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ, ಕೈಗಾರಿಕ ತರಬೇತಿಗೆ ಸೇರಿದವರು ತಮ್ಮ ಪಠ್ಯ ಜೊತೆಗೆ ಮುಂದಿನ ದಿನಗಳಲ್ಲಿ ಅಭಿವೃದ್ಧಿಗೆ ಪೂರಕವಾದ ವಿಷಯಗಳನ್ನು ಕಲಿಯುವಂತಾಗಬೇಕು. ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಪ್ರತಿಯೊಂದು ವಿಷಯದಲ್ಲೂ ಮುಂದಿರಬೇಕು. ಆ ನಿಟ್ಟಿನಲ್ಲಿ ತಮ್ಮ ಜ್ಞಾನವನ್ನು ವೃದ್ಧಿಸಿಕೊಳ್ಳುವುದು ಅಗತ್ಯ ಎಂದರು.