ಮಂಡ್ಯ: ಇಂದಿನಿಂದ ಬಿಜೆಪಿಗೆ ಸಂಪೂರ್ಣ ಬೆಂಬಲ ನೀಡುತ್ತೇನೆ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಷ್ ಘೋಷಿಸಿದ್ದಾರೆ.
ಸುಮಲತಾ ಬಿಜೆಪಿ ಸೇರುತ್ತಾರೆ ಎಂದು ಹಲವು ದಿನಗಳಿಂದ ಹರಿದಾಡುತ್ತಿದ್ದ ವದಂತಿಗಳಿಗೆ ಸ್ಪಷ್ಟನೆ ನೀಡಿದ್ದಾರೆ.
ಅವರು ನಿನ್ನೆಯಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಅರುಣ್ ಸಿಂಗ್, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದರು.
ನಾನು ಯಾವುದೇ ಕಾರಣಕ್ಕೂ ಕುಟುಂಬ ರಾಜಕಾರಣ ಮಾಡುವುದಿಲ್ಲ, ನನಗೆ ಅಂಬರೀಶ್ ಹೆಸರೂ ಉಳಿಯಬೇಕು. ನಾನು ರಾಜಕಾರಣದಲ್ಲಿ ಇರುವವರೆಗೂ ನನ್ನ ಪುತ್ರ ರಾಜಕಾರಣಕ್ಕೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಅಂಬಿ ಕುಟುಂಬ ದ್ವೇಷದ ರಾಜಕಾರಣ ಮಾಡುವುದಿಲ್ಲ. ಪಕ್ಷೇತರ ಸಂಸದೆಯಾದರೂ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಹೆಚ್ಚು ಅನುದಾನ ನೀಡಿದ್ದಾರೆ. ಮೋದಿ ನಾಯಕತ್ವದಲ್ಲಿ ದೇಶ ಸಾಗುತ್ತಿದೆ. ಜಿಲ್ಲೆಯ ಭವಿಷ್ಯದ ದೃಷ್ಠಿಯಿಂದ ಒಂದು ಹೆಜ್ಜೆ ಮುಂದೆ ಇಟ್ಟಿದ್ದೇನೆ ಎಂದರು.