Home ಟಾಪ್ ಸುದ್ದಿಗಳು ಮೆಹ್ಸಾನಾ ದಂಗೆ ಪ್ರಕರಣ: ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ದೋಷಿ ತೀರ್ಪಿಗೆ ತಡೆ ನೀಡಿದ ಸುಪ್ರೀಂ...

ಮೆಹ್ಸಾನಾ ದಂಗೆ ಪ್ರಕರಣ: ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ದೋಷಿ ತೀರ್ಪಿಗೆ ತಡೆ ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಮೆಹ್ಸಾನಾ ದಂಗೆ ಪ್ರಕರಣದಲ್ಲಿ ಗುಜರಾತ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಹಾರ್ದಿಕ್ ಪಟೇಲ್ ದೋಷಿ ಎಂದು ನೀಡಲಾಗಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆ ನೀಡಿದೆ.

ಪ್ರಕರಣದಲ್ಲಿ ಗುಜರಾತ್ ಹೈಕೋರ್ಟ್ ನೀಡಿದ್ದ ತೀರ್ಪಿಗೆ ತಡೆ ನೀಡುವುದು ಸೂಕ್ತ ಎಂದು ನ್ಯಾಯಮೂರ್ತಿಗಳಾದ ಎಸ್ ಅಬ್ದುಲ್ ನಝೀರ್ ಮತ್ತು ವಿಕ್ರಮ್ ನಾಥ್ ಅವರಿದ್ದ ಪೀಠ ಅಭಿಪ್ರಾಯಪಟ್ಟಿದೆ. ಮೇಲ್ಮನವಿಯನ್ನು ಇತ್ಯರ್ಥಪಡಿಸುವವರೆಗೆ ತಡೆಯಾಜ್ಞೆ ಜಾರಿಯಲ್ಲಿರುತ್ತದೆ ಎಂದು ನ್ಯಾಯಾಲಯ ಹೇಳಿದೆ.

ಪಾಟಿದಾರ್ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಆಗ್ರಹಿಸಿ 2015ರಲ್ಲಿ ಪಟೇಲ್ ಅವರು ಚಳವಳಿಯ ನೇತೃತ್ವ ವಹಿಸಿದ್ದರು. ಘಟನೆ ವೇಳೆ ಹಿಂಸಾಚಾರ ಭುಗಿಲೆದ್ದು ಬಿಜೆಪಿ ಶಾಸಕರ ಕಚೇರಿ ಧ್ವಂಸಗೊಂಡಿತ್ತು. ಪ್ರಕರಣದ ತನಿಖೆ ನಡೆಸಿದ್ದ ವಿಚಾರಣಾ ನ್ಯಾಯಾಲಯ ಪಟೇಲ್ ಅವರನ್ನು ದೋಷಿ ಎಂದು ಘೋಷಿಸಿತ್ತು. ತೀರ್ಪಿಗೆ ತಡೆ ನೀಡುವಂತೆ ಕೋರಿ 2019ರ ಸಾರ್ವತ್ರಿಕ ಚುನಾವಣೆಗೆ ಮುನ್ನ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ಹೈಕೋರ್ಟ್ ಅರ್ಜಿ ತಿರಸ್ಕರಿಸಿದ್ದರಿಂದ ಅವರು ಚುನಾವಣೆಗೆ ಸ್ಪರ್ಧಿಸಲು ಸಾಧ್ಯವಾಗಿರಲಿಲ್ಲ. ಬಳಿಕ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದರು.

ಈ ವರ್ಷದ ಡಿಸೆಂಬರ್ನಲ್ಲಿ ಗುಜರಾತ್ ವಿಧಾನಸಭೆಗೆ ಚುನಾವಣೆ ನಡೆಯಲಿದೆ.

(ಕೃಪೆ: ಬಾರ್ & ಬೆಂಚ್)

Join Whatsapp
Exit mobile version