ನವದೆಹಲಿ: ಕೇರಳ ರಾಜ್ಯದಿಂದ ಕರ್ನಾಟಕಕ್ಕೆ ಪ್ರವೇಶಿಸಲು ಕರ್ನಾಟಕ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಪ್ರಶ್ನಿಸಿ ಕೇರಳದ ಮಂಜೇಶ್ವರ ಕ್ಷೇತ್ರದ ಶಾಸಕ ಎಕೆಎಂ ಅಶ್ರಫ್ ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಎಲ್. ನಾಗೇಶ್ವರ ರಾವ್ ಮತ್ತು ಬಿ.ಆರ್. ಗವಾಯಿ ಅವರ ನ್ಯಾಯಪೀಠವು ದೇಶದಲ್ಲಿ ಕೊವಿಡ್ ಇನ್ನೂ ಕೊನೆಗೊಂಡಿಲ್ಲ. ಹೀಗಾಗಿ, ಮುನ್ನೆಚ್ಚರಿಕಾ ಕ್ರಮವಾಗಿ ಕರ್ನಾಟಕ ಸರ್ಕಾರ ವಿಧಿಸಿರುವ ಷರತ್ತುಗಳಲ್ಲಿ ತಪ್ಪೇನಲ್ಲ. ಇದರಿಂದ ಯಾವುದೇ ವ್ಯಕ್ತಿಯ ಮೂಲಭೂತ ಹಕ್ಕುಗಳಿಗೆ ಚ್ಯುತಿ ಆಗುವುದಿಲ್ಲ. ಹಾಗಾಗಿ ಈ ನಿರ್ಧಾರ ಅಸಮಂಜಸವಾದುದಲ್ಲ ಎಂದು ಪೀಠ ಅಭಿಪ್ರಾಯ ಪಟ್ಟಿದೆ.
ಕೇರಳದವರು ಮಂಗಳೂರಿನ ಗಡಿ ದಾಟಲು ಆರ್ ಟಿ-ಪಿಸಿಆರ್ ನೆಗೆಟಿವ್ ರಿಪೋರ್ಟ್ ಕಡ್ಡಾಯ ಎಂದು ಕರ್ನಾಟಕ ಸರ್ಕಾರ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ಮಂಜೇಶ್ವರದ ಮುಸ್ಲಿಂ ಲೀಗ್ ಶಾಸಕ ಎಕೆಎಂ ಅಶ್ರಫ್ ಸುಪ್ರೀಂಕೋರ್ಟ್ ಮೊರೆಹೋಗಿದ್ದರು.
ಕೇರಳದ ಶಾಸಕರ ಪರ ವಾದ ಮಂಡಿಸಿದ ವಕೀಲ ಹಾರಿಸ್ ಬೀರನ್, ಕಾಸರಗೋಡಿನ ಜನರು ಶಿಕ್ಷಣ, ವೈದ್ಯಕೀಯ ಮತ್ತು ಇತರ ಅಗತ್ಯಗಳಿಗಾಗಿ ಮಂಗಳೂರನ್ನು ಅವಲಂಬಿಸಿದ್ದಾರೆ. ಕರ್ನಾಟಕ ಸರ್ಕಾರ ಹೊರಡಿಸಿರುವ ಸುತ್ತೋಲೆಯಿಂದಾಗಿ ಪ್ರತಿನಿತ್ಯ ಮಂಗಳೂರಿಗೆ ಪ್ರಯಾಣ ಬೆಳಸುವುದನ್ನು ನಿರ್ಬಂಧಿಸಲಾಗಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಹೊರಡಿಸಿದ್ದ ಮಾರ್ಗಸೂಚಿಗಳನ್ನು ಉಲ್ಲೇಖಿಸಿದ್ದ ವಕೀಲ ಹಾರಿಸ್ ಬೀರನ್, ಗಾಳಿ, ನೀರು ಅಥವಾ ರಸ್ತೆಯ ಮೂಲಕ ವ್ಯಕ್ತಿಗಳು ಮತ್ತು ಸರಕುಗಳ ಅಂತರ್-ರಾಜ್ಯ ಸಂಚಾರದ ಮೇಲೆ ಯಾವುದೇ ನಿರ್ಬಂಧಗಳನ್ನು ವಿಧಿಸದಂತೆ ಸರ್ಕಾರ ಹೇಳಿದೆ. ಆದರೆ, ಕರ್ನಾಟಕದ ಗಡಿಯೊಳಗೆ ಕೇರಳಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಆಕ್ಷೇಪಿಸಿದ್ದರು.
ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕರ್ನಾಟಕ ರಾಜ್ಯವು ಹೊರಡಿಸಿದ ಸುತ್ತೋಲೆಗಳಲ್ಲಿ ಈ ನ್ಯಾಯಾಲಯವು ಮಧ್ಯ ಪ್ರವೇಶಿಸುವಂತಿಲ್ಲ. ಆದ್ದರಿಂದ ಮಧ್ಯಪ್ರವೇಶಿಸಲು ನಮಗೆ ಯಾವುದೇ ಕಾರಣವಿಲ್ಲ ಎಂದು ನ್ಯಾಯಪೀಠ ಹೇಳಿದೆ.