Home ಟಾಪ್ ಸುದ್ದಿಗಳು ಎಲ್ಲಿದ್ದರೂ ಬಂದು ಪೊಲೀಸರಿಗೆ ಶರಣಾಗು: ಪ್ರಜ್ವಲ್ ಗೆ ದೇವೇಗೌಡ ತಾಕೀತು

ಎಲ್ಲಿದ್ದರೂ ಬಂದು ಪೊಲೀಸರಿಗೆ ಶರಣಾಗು: ಪ್ರಜ್ವಲ್ ಗೆ ದೇವೇಗೌಡ ತಾಕೀತು

ಬೆಂಗಳೂರು: ಎಲ್ಲಿದ್ದರೂ ಬಂದು ಪೊಲೀಸರಿಗೆ ಶರಣಾಗಬೇಕು, ವಿಚಾರಣೆ ಎದುರಿಸಬೇಕು ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರು ತಮ್ಮ ಮೊಮ್ಮಗನೂ ಆದ ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಕರೆ ನೀಡಿದ್ದಾರೆ.

ಈ ಕುರಿತು ಬರೆದ ಪತ್ರವನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಅವರು, ‘ಇದು ನಾನು ಅವನಿಗೆ ಕೊಡುತ್ತಿರುವ ಎಚ್ಚರಿಕೆ. ಅವನು ಈ ಎಚ್ಚರಿಕೆಗೆ ಮನ್ನಣೆ ಕೊಡದಿದ್ದಲ್ಲಿ ಅವನು ನನ್ನ ಮತ್ತು ಕುಟುಂಬದವರೆಲ್ಲರ ಕೋಪ ಎದುರಿಸಬೇಕಾಗುತ್ತದೆ. ಎಸಗಿದ್ದಾನೆ ಎನ್ನಲಾದ ತಪ್ಪುಗಳನ್ನು ತೀರ್ಮಾನಿಸಲು ಕಾನೂನು ಇದೆ. ತಲೆಬಾಗದಿದ್ದಲ್ಲಿ, ಏಕಾಂಗಿಯಾಗಬೇಕಾಗುತ್ತದೆ. ನನ್ನ ಬಗ್ಗೆ ಗೌರವವಿದ್ದಲ್ಲಿ ಅವನು ಕೂಡಲೆ ಹಿಂದಿರುಗಿ ಬರಬೇಕು’ ಎಂದು ಹೇಳಿದ್ದಾರೆ.


‘ನಾನು ಅಥವಾ ನನ್ನ ಕುಟುಂಬ ವಿಚಾರಣೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಯಾವುದೇ ಭಾವನೆಗೆ ಸಿಲುಕದೆ, ಅವನು ಎಸಗಿದ್ದಾನೆ ಎನ್ನಲಾದ ಕೃತ್ಯಗಳು ಮತ್ತು ತಪ್ಪುಗಳಿಂದ ನೊಂದಿರುವ, ಅನ್ಯಾಯಕ್ಕೆ ಒಳಗಾಗಿರುವ ಎಲ್ಲರಿಗೂ ನ್ಯಾಯ ಸಿಗಬೇಕು. ಜನರ ವಿಶ್ವಾಸವನ್ನು ಮರಳಿ ಪಡೆಯುವುದಷ್ಟೆ ನನ್ನ ಗುರಿ. ಜನರು ಆರು ದಶಕಗಳ ಕಾಲ ನನ್ನ ರಾಜಕೀಯ ಜೀವನದುದ್ದಕ್ಕೂ ಜತೆಗೆ ನಿಂತಿದ್ದಾರೆ. ಅವರಿಗೆ ನಾನು ಸದಾ ಋಣಿ. ಬದುಕಿರುವವರೆಗೂ ಅವರ ಹಿತದ ವಿರುದ್ಧ ನಡೆದುಕೊಳ್ಳುವುದಿಲ್ಲ’ ಎಂದಿದ್ದಾರೆ.


‘ಆತ ನನಗೆ, ನನ್ನ ಕುಟುಂಬಕ್ಕೆ, ನನ್ನ ಸಹೋದ್ಯೋಗಿಗಳಿಗೆ, ಸ್ನೇಹಿತರಿಗೆ ಮತ್ತು ಪಕ್ಷದ ಕಾರ್ಯಕರ್ತರಿಗೆ ತಂದೊಡ್ದಿರುವ ಆಘಾತ ಮತ್ತು ನೋವಿನಿಂದ ಹೊರಬಂದು ಮಾತನಾಡಲು ಕೊಂಚ ಸಮಯ ಹಿಡಿಯಿತು. ನಾನು ಈಗಾಗಲೇ ಸ್ಪಷ್ಟಪಡಿಸಿರುವ ಹಾಗೆ ಕಾನೂನಿನ ಪ್ರಕಾರ ಅವನು ತಪ್ಪಿತಸ್ಥನೆಂದಾದರೆ, ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು. ನನ್ನ ಈ ನಿಲುವನ್ನು ಎಚ್. ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ’ ಎಂದು ಪತ್ರದಲ್ಲಿ ವಿವರಿಸಿದ್ದಾರೆ.

Join Whatsapp
Exit mobile version