ಟಿ20 ವಿಶ್ವಕಪ್‌ 2024: ಐರ್ಲೆಂಡ್ ವಿರುದ್ಧ 8 ವಿಕೆಟ್‌ಗಳ ಗೆಲುವಿನೊಂದಿಗೆ ಶುಭಾರಂಭ ಮಾಡಿದ ಭಾರತ

Prasthutha|

ನ್ಯೂಯಾರ್ಕ್‌: ಇಲ್ಲಿನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇಂದು ನಡೆದ ಟಿ20 ವಿಶ್ವಕಪ್ ಪಂದ್ಯದಲ್ಲಿ ಐರ್ಲೆಂಡ್ ತಂಡವನ್ನು 8 ವಿಕೆಟ್​ಗಳಿಂದ ಮಣಿಸಿದ ಟೀಂ ಇಂಡಿಯಾ ಲೀಗ್​ನಲ್ಲಿ ಗೆಲುವಿನ ಶುಭಾರಂಭ ಮಾಡಿದೆ. ಐರ್ಲೆಂಡ್ ನೀಡಿದ 96 ರನ್​ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಪರ ನಾಯಕ ರೋಹಿತ್ ಶರ್ಮಾ ಅಜೇಯ ಅರ್ಧಶತಕದ ಇನ್ನಿಂಗ್ಸ್ ಆಡಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು..

- Advertisement -

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಐರ್ಲೆಂಡ್ ತಂಡ, ಟೀಂ ಇಂಡಿಯಾ ವೇಗಿಗಳ ಮಾರಕ ದಾಳಿಗೆ ನಲುಗಿ ಕೇವಲ 96 ರನ್​ಗಳಿಗೆ ಆಲೌಟ್ ಆಗಿದೆ. ಐರ್ಲೆಂಡ್ ತಂಡ ಫೂರ್ಣ 20 ಓವರ್​ಗಳನ್ನು ಆಡಲು ಸಾಧ್ಯವಾಗಲಿಲ್ಲ. ಅಂತಿಮವಾಗಿ 16 ಓವರ್‌ಗಳಿಗೆ ತನ್ನೇಲ್ಲ ವಿಕೆಟ್ ಕಳೆದುಕೊಂಡ ಐರ್ಲೆಂಡ್ 96 ರನ್‌ ಕಲೆಹಾಕಲಷ್ಟೇ ಶಕ್ತವಾಯಿತು. ಉಪನಾಯಕ ಹಾರ್ದಿಕ್ ಪಾಂಡ್ಯ ಟೀಂ ಇಂಡಿಯಾ ಪರ ಅತಿ ಹೆಚ್ಚು 3 ವಿಕೆಟ್ ಕಬಳಿಸಿದರು.

97 ರನ್‌ಗಳ ಸಾಧಾರಣ ಗುರಿ ಪಡೆದ ಭಾರತ ತಂಡವು ನಾಯಕ ರೋಹಿತ್ ಶರ್ಮಾ ಅರ್ಧಶತಕದ ನೆರವಿನಿಂದ 12.2 ಓವರ್‌ಗಳಲ್ಲಿ ಕೇವಲ 2 ವಿಕೆಟ್ ಕಳೆದುಕೊಂಡು ಗೆಲುವಿನ ಗಡಿ ತಲುಪಿತು.

- Advertisement -

ಟಿ20 ವಿಶ್ವಕಪ್‌ನಲ್ಲಿ ಇದೇ ಮೊದಲ ಬಾರಿಗೆ ಇನ್ನಿಂಗ್ಸ್ ಆರಂಭಿಸಿದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಉತ್ತಮ ಆರಂಭ ನೀಡಲಿಲ್ಲ. ಏಕೆಂದರೆ, ತಂಡದ ಮೊತ್ತ 22 ರನ್‌ಗಳಾಗಿದ್ದಾಗ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಕೇವಲ 1 ರನ್‌ ಗಳಿಸಿ ವಿಕೆಟ್ ಒಪ್ಪಿಸಿದರು.

ನಾಯಕ ರೋಹಿತ್ ಶರ್ಮಾ ಗಾಯಗೊಂಡು ನಿವೃತ್ತಿಯಾಗುವ ಮೊದಲು ಕೇವಲ 37 ಎಸೆತಗಳಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್‌ಗಳ ಸಮೇತ 52 ರನ್‌ಗಳ ಅರ್ಧಶತಕ ಬಾರಿಸಿದರು.

3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದ ರಿಷಭ್ ಪಂತ್ 26 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್‌ಗಳ ಮೂಲಕ ಅಜೇಯ 36 ರನ್ ಗಳಿಸಿದರೆ, ಸೂರ್ಯಕುಮಾರ್ ಯಾದವ್ 2 ರನ್ ಗಳಿಸಿದರು.

ಬೌಲಿಂಗ್‌ನಲ್ಲಿ ಐರ್ಲೆಂಡ್ ತಂಡದ ಪರ ಮಾರ್ಕ್ ಅಡೈರ್ ಮತ್ತು ಬೆಂಜಮಿನ್ ವೈಟ್ ತಲಾ ಒಂದೊಂದು ವಿಕೆಟ್ ಪಡೆದರು. ಇನ್ನು ಈ ಗೆಲುವಿನ ಮೂಲಕ ಭಾರತ ತಂಡ ಎ ಗುಂಪಿನಲ್ಲಿ 2 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

ಇದಕ್ಕೂ ಮುನ್ನ ಐರ್ಲೆಂಡ್ ತಂಡದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ನಾಯಕ ಪಾಲ್ ಸ್ಟಿರ್ಲಿಂಗ್ (2) ಮತ್ತು ಆಂಡ್ರ್ಯೂ ಬಾಲ್ಬಿರ್ಲಿ (7) ಉತ್ತಮ ಆರಂಭ ನೀಡಲು ಸಾಧ್ಯವಾಗಲಿಲ್ಲ. ಈ ಇಬ್ಬರೂ ಬ್ಯಾಟರ್‌ಗಳು ತಂಡದ ಮೊತ್ತ 9 ರನ್‌ಗಳಾಗುವಷ್ಟರಲ್ಲಿ ಔಟಾದರು.

ನಂತರ ಬಂದ ಲೋರ್ಕನ್ ಟಕರ್ 10 ರನ್, ಹ್ಯಾರಿ ಟೆಕ್ಟರ್ 4 ರನ್, ಕರ್ಟಿಸ್ ಕ್ಯಾಂಫರ್ 12 ರನ್, ಜಾರ್ಜ್ ಡಾಕ್ರೆಲ್ ಕೇವಲ 3 ರನ್, ಮಾರ್ಕ್ ಅಡೈರ್ 3 ರನ್, ಜೋಶ್ವಾ ಲಿಟಲ್ 14 ರನ್ ಗಳಿಸಿದರು. ಉಳಿದಂತೆ ಕೊನೆಯಲ್ಲಿ ಗರೆಥ್ ಡೆಲಾನಿ 14 ಎಸೆತಗಳಲ್ಲಿ 2 ಬೌಂಡರಿ ಹಾಗೂ 2 ಸಿಕ್ಸರ್ ಸಮೇತ 26 ರನ್ ಗಳಿಸಿ ತಂಡದ ಮೊತ್ತವನ್ನು 90ರ ಗಡಿ ದಾಟಿಸಿದರು.

ಬೌಲಿಂಗ್‌ನಲ್ಲಿ ಭಾರತ ತಂಡದ ಪರ ಹಾರ್ದಿಕ್ ಪಾಂಡ್ಯ 4 ಓವರ್‌ಗಳಲ್ಲಿ 27 ರನ್ ನೀಡಿ 3 ವಿಕೆಟ್ ಕಬಳಿಸಿದರೆ, ಅರ್ಶ್‌ದೀಪ್ ಸಿಂಗ್ 4 ಓವರ್‌ಗಳಲ್ಲಿ 35 ರನ್ ನೀಡಿ 2 ವಿಕೆಟ್ ಪಡೆದರು.

ಜಸ್ಪ್ರೀತ್ ಬುಮ್ರಾ 3 ಓವರ್‌ಗಳಲ್ಲಿ 6 ರನ್ ನೀಡಿ 2 ವಿಕೆಟ್ ಪಡೆದರೆ, ಉಳಿದಂತೆ ಮೊಹಮ್ಮದ್ ಸಿರಾಜ್ ಮತ್ತು ಅಕ್ಷರ್ ಪಟೇಲ್ ತಲಾ ಒಂದೊಂದು ವಿಕೆಟ್ ಪಡೆದರು.

ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಜಸ್ಪ್ರೀತ್ ಬುಮ್ರಾ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.



Join Whatsapp