ಕೋವಿಡ್ 3ನೇ ಅಲೆ ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರ ವಹಿಸಿ: ಶ್ರೀನಿವಾಸ ಪೂಜಾರಿ

Prasthutha|

ಮಡಿಕೇರಿ: ಕೋವಿಡ್‌ ನ ಮೂರನೇ ಅಲೆ ಆರಂಭವಾಗಿದ್ದು, ಯಾವುದೇ ಕಾರಣಕ್ಕೂ ನಿರ್ಲಕ್ಷ್ಯವಹಿಸದೆ, ಗಂಭೀರವಾಗಿ ಪರಿಗಣಿಸಿ ಸೋಂಕು ಹರಡುವುನ್ನು  ತಡೆಗಟ್ಟಲು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. 

- Advertisement -

ಮಡಿಕೇರಿ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು. ಕೋವಿಡ್-19 ಮೂರನೇ ಅಲೆ ಓಮಿಕ್ರಾನ್ ವೇಗವಾಗಿ ಹರಡುವುದರಿಂದ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ‘ಗ್ರಾ.ಪಂ.ಮಟ್ಟದಲ್ಲಿ ಕಾರ್ಯಪಡೆ’ಯನ್ನು ಬಲಪಡಿಸಿ ಗ್ರಾ.ಪಂ.ಮಟ್ಟದಲ್ಲಿ ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕೋವಿಡ್-19 ನಿಯಂತ್ರಣ ಸಂಬಂಧ ತಾಲ್ಲೂಕು ಮಟ್ಟದಲ್ಲಿಯೂ ಸಹ ಶಾಸಕರ ಅಧ್ಯಕ್ಷತೆಯಲ್ಲಿ ಸಭೆ ನಡೆಸುವಂತೆ ಸಚಿವರು ಸೂಚಿಸಿದರು. ಪ್ರವಾಸಿ ಸ್ಥಳಗಳಿಗೆ ಆಗಮಿಸುವ ಪ್ರವಾಸಿಗರು ಎರಡು ಡೋಸ್ ಕೋವಿಡ್ ನಿರೋಧಕ ಲಸಿಕೆ ಪಡೆದಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಬೇಕು. ಪ್ರವಾಸಿ ಸ್ಥಳಗಳಲ್ಲಿ ಹೆಚ್ಚಿನ ನಿಗಾ ವಹಿಸಬೇಕು. ಗಡಿ ಪ್ರದೇಶದ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಮಾಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

- Advertisement -

ಕೋವಿಡ್ ಲಸಿಕೆ ಪ್ರಗತಿ ಸಂಬಂಧಿಸಿದಂತೆ ಮಾಹಿತಿ ಪಡೆದ ಜಿಲ್ಲಾ ಉಸ್ತುವಾರಿ ಸಚಿವರು 15 ವರ್ಷ ಮೇಲ್ಪಟ್ಟವರೆಲ್ಲರಿಗೂ ಪ್ರಥಮ ಮತ್ತು ದ್ವಿತೀಯ ಡೋಸ್ ಆಗಿರಬೇಕು ಎಂದು ಅವರು ಸೂಚಿಸಿದರು.

ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಮಾತನಾಡಿ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಹಂತದಲ್ಲಿ ಎಷ್ಟು ವಿದ್ಯಾರ್ಥಿಗಳು ಲಸಿಕೆ ಪಡೆಯಲು ಅರ್ಹರಾಗಿದ್ದಾರೆ ಎಂಬ ಬಗ್ಗೆ ನಿಖರ ಮಾಹಿತಿ ಒದಗಿಸುವಂತೆ ಸೂಚಿಸಿದರು. ಈ ಕುರಿತು ಮಾತನಾಡಿದ ಸಚಿವರು ಮೂರು ದಿನದಲ್ಲಿ ಅರ್ಹರೆಲ್ಲರಿಗೂ ಲಸಿಕೆ ನೀಡುವಂತೆ ಸೂಚಿಸಿದರು.

Join Whatsapp