ಚೆನ್ನೈ: ತಮಿಳುನಾಡಿನ ಕಲ್ಲಕುರಿಚಿ ವಸತಿ ಶಾಲೆಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದ ವಿದ್ಯಾರ್ಥಿನಿಯ ಮೃತದೇಹವನ್ನು ಪೋಷಕರಿಗೆ ಹಸ್ತಾಂತರಿಸಲಾಗಿದೆ.
ಜುಲೈ 13ರಂದು ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದ ವಿದ್ಯಾರ್ಥಿನಿಯ ಸಾವಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಒಂದು ವಾರದಿಂದ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ಪಡೆದುಕೊಂಡಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿ ಶಾಲೆಯ ಇಬ್ಬರು ಶಿಕ್ಷಕರನ್ನು ಬಂಧಿಸಲಾಗಿದೆ. ಹಿಂಸಾಚಾರದಲ್ಲಿ ಭಾಗಿಯಾಗಿದ್ದಕ್ಕಾಗಿ ಮತ್ತು ಜುಲೈ 17 ರಂದು ಶಾಲೆಯನ್ನು ಧ್ವಂಸಗೊಳಿಸಿದ್ದಕ್ಕಾಗಿ ಸುಮಾರು 300ಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ವಿದ್ಯಾರ್ಥಿನಿಯು ಕಡಲೂರು ಜಿಲ್ಲೆಯ ಪೆರಿಯನಸಲೂರು ಗ್ರಾಮದವಳಾಗಿದ್ದು, ಇಂದು ಅಂತ್ಯಕ್ರಿಯೆ ನಡೆಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.