Home ರಾಜ್ಯ ಅನ್ ಲಾಕ್ ದಿನದಿಂದಲೇ ಶಿಕ್ಷಕರು ಶಾಲೆಗಳಿಗೆ ಹಾಜರಾಗಬೇಕು: ಸುರೇಶ್ ಕುಮಾರ್

ಅನ್ ಲಾಕ್ ದಿನದಿಂದಲೇ ಶಿಕ್ಷಕರು ಶಾಲೆಗಳಿಗೆ ಹಾಜರಾಗಬೇಕು: ಸುರೇಶ್ ಕುಮಾರ್

ಬೆಂಗಳೂರು: ಶಾಲಾರಂಭದ ಕುರಿತು ಈಗಾಗಲೇ ಮಾರ್ಗದರ್ಶಿ ಸೂತ್ರಗಳನ್ನು ಹೊರಡಿಸಲಾಗಿದೆಯಾದರೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಲಾಕ್ ಡೌನ್ ಜಾರಿಯಲ್ಲಿದ್ದು, ಶಿಕ್ಷಕರ ಚಲನವಲನಕ್ಕೆ ತೊಂದರೆಯಾಗಿರುವುದರಿಂದ ಶಿಕ್ಷಕರು ಲಾಕ್ ಡೌನ್  ತೆರವಾದ ದಿನದಿಂದಲೇ ಶಾಲೆಗಳಿಗೆ ಭೌತಿಕವಾಗಿ ಹಾಜರಾಗಲು ಅವಕಾಶ ನೀಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.


ಸೋಮವಾರ ವಿಧಾನಸೌಧದಲ್ಲಿ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಂಗಳವಾರದಿಂದ  ಶಾಲೆಗಳಿಗೆ ಶಿಕ್ಷಕರು ಹಾಜರಾಗಿ ಮಕ್ಕಳ ನೋಂದಣಿ ಪ್ರಾರಂಭಿಸಬೇಕಾಗಿರುವ  ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಶಿಕ್ಷಕರ ಚಲನವಲನಕ್ಕೆ ತೊಂದರೆಯಾಗಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಪೂರ್ಣಗೊಂಡ ನಂತರ ಶಿಕ್ಷಕರು ಶಾಲೆಗಳಿಗೆ ಹಾಜರಾಗುವಂತೆ ಸುತ್ತೋಲೆ ಹೊರಡಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ‌ಎಂದರು.
ಹಲವು ಉಪನ್ಯಾಸಕ ಸಂಘಟನೆಗಳ ಕೋರಿಕೆಯ ಮೇರೆಗೆ ಮೊದಲ ಪಿ.ಯು.ಸಿ. ಮೌಲ್ಯಾಂಕನ  ಪ್ರಕ್ರಿಯೆಯನ್ನು ಎಲ್ಲ ಜಿಲ್ಲೆಗಳ ಲಾಕ್-ಡೌನ್ ಅವಧಿ ಪೂರ್ಣಗೊಳ್ಳುವವರೆಗೆ ಸಮಯ ವಿಸ್ತರಿಸಿ ಆದೇಶವನ್ನು ಹೊರಡಿಸಲಾಗುತ್ತದೆ‌ಎಂದು ಸಹ ಸಚಿವರು ಹೇಳಿದ್ದಾರೆ. ಈ ಕುರಿತಂತೆ ಪದವಿಪೂರ್ವ ಶಿಕ್ಷಕರಿಗೆ ಸೂಚನೆ ನೀಡಲಾಗಿದ್ದು, ಸದ್ಯದಲ್ಲಿಯೇ ಅವರು ಕ್ರಮ‌‌ಜರುಗಿಸಲಿದ್ದಾರೆ ಎಂದು ಅವರು ಹೇಳಿದರು.


ಈ ಬಾರಿ ನಿಗದಿತ ಅವಧಿಯ ಮೌಲ್ಯಮಾಪನ ಪ್ರಕ್ರಿಯೆಯನ್ನು ಹೆಚ್ಚು ಸಮರ್ಥವಾಗಿ ಜಾರಿಯಲ್ಲಿಡುವ ಅವಶ್ಯಕತೆ ಇದೆ.  ಪ್ರತಿ ಸೂಚಿತ ಅವಧಿಗೆ ವಿದ್ಯಾರ್ಥಿಗಳ ಚೈಲ್ಡ್ ಪ್ರೊಫೈಲ್ ಗಳನ್ನು ನಿಯಮಿತವಾಗಿ ದಾಖಲಿಸುವ, ಕಲಿಕಾ ಸಾಮರ್ಥ್ಯಗಳನ್ನು ಅಳೆಯುವ ಮಾನದಂಡಗಳಾಗಿ ರೂಪಿಸುವ ಸದೃಢ ವ್ಯವಸ್ಥೆಯನ್ನು ಜಾರಿಯಲ್ಲಿಡುವ ವ್ಯವಸ್ಥೆ ರೂಪಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ಅತ್ಯವಶ್ಯಕವಾಗಿದ್ದು, ಇಂಥಹ ಸಂದರ್ಭದಲ್ಲಿ ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿ ಮಂಡಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಈ ಬಾರಿಯ ಎರಡು ದಿನಗಳ ಎಸ್.ಎಸ್.ಎಲ್.ಸಿ. ಪರೀಕ್ಷೆ ನಿರ್ವಹಣೆ ಕುರಿತಂತೆ ಜೂ. 28 ರಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ವಿಡಿಯೋ ಸಂವಾದ ಸಭೆ ನಡೆಯಲಿದ್ದು,   ಸಭೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಇಲಾಖೆಯ ಆಯುಕ್ತರನ್ನು  ಸುರಕ್ಷತಾ ವಾತಾವರಣದಲ್ಲಿ ಪರೀಕ್ಷೆ ನಡೆಸುವ ಕ್ರಮಗಳ ಕುರಿತು ವಿಸ್ತ್ರತ ಚರ್ಚೆ ನಡೆಸಿ ಮಾರ್ಗದರ್ಶನ ನೀಡಲಾಗುವುದು  ಎಂದು ಸುರೇಶ್ ಕುಮಾರ್ ತಿಳಿಸಿದರು.
ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಕೊಠಡಿ  ಮೇಲ್ವಿಚಾರಕರುಗಳಿಗೆ ಕೋವಿಡ್ – 19ರ ಲಸಿಕೆಯನ್ನು ನೀಡುವ ಪ್ರಕ್ರಿಯೆಯನ್ನು ಪರೀಕ್ಷೆಗೆ ಮುನ್ನ ಪೂರ್ಣಗೊಳಿಸುವಲ್ಲಿ ಜಿಲ್ಲಾಡಳಿತದೊಂದಿಗೆ ಸಮನ್ವಯತೆ ಸಾಧಿಸಿ ಕ್ರಮ ವಹಿಸಬೇಕೆಂದೂ ಸೂಚಿಸಲಾಗಿದೆ ಎಂದೂ ಸಚಿವರು ಹೇಳಿದರು.
ಶಿಕ್ಷಕರ ವರ್ಗಾವಣಾ ಪ್ರಕ್ರಿಯೆಯ ಕುರಿತಂತೆ ನಿಯಮಗಳ ಆಕ್ಷೇಪಣಾ ಸಲ್ಲಿಕೆ ಅವಧಿ  ಪೂರ್ಣಗೊಳ್ಳುತಿರುವ ಹಿನ್ನೆಲೆಯಲ್ಲಿ ಕೂಡಲೇ ಸರ್ಕಾರದ ಅಧಿಸೂಚನೆಯನ್ನು ಹೊರಡಿಸಿ ಸಾಧ್ಯವಾದಷ್ಟು ಶೀಘ್ರವೇ ವರ್ಗಾವಣಾ ಪ್ರಕ್ರಿಯೆ ಕೈಗೊಳ್ಳಬೇಕೆಂದು  ಸೂಚನೆ ನೀಡಲಾಗಿದೆ ಎಂದು ಸಚಿವರು ಹೇಳಿದರು. ಯಾವುದೇ ಅಡೆತಡೆಗಳು ಬಾರದ ರೀತಿಯಲ್ಲಿ ತಂತ್ರಜ್ಞಾನಾಧಾರಿತ ವರ್ಗಾವಣಾ ಪ್ರಕ್ರಿಯೆ ನಡೆಸಬೇಕೆಂದು ಸೂಚಿಸಲಾಗಿದೆಯೆಂದರು.


ಖಾಸಗಿ ಖಾಸಗಿ ಶಾಲಾ ಶಿಕ್ಷಕರಿಗೆ  ಮುಖ್ಯಮಂತ್ರಿಗಳು  ಘೋಷಿಸಿರುವ ಪ್ಯಾಕೇಜ್ ಪರಿಹಾರವನ್ನು ಕ್ಲಪ್ತ ಸಮಯದಲ್ಲಿ  ಫಲಾನುಭವಿಗಳಿಗೆ ನೇರವಾಗಿ ವಿತರಿಸುವ ಪ್ರಕ್ರಿಯೆಯನ್ನು ಕ್ಷಿಪ್ರಗೊಳಿಸಬೇಕೆಂದೂ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಶಿಕ್ಷಕರ, ಶಿಕ್ಷಕೇತರರ ಹಾಗೂ ಅತಿಥಿ ಶಿಕ್ಷಕರ‌‌ಬ್ಯಾಂಕ್‌ಖಾತೆಗಳ‌ವಿವರಗಳನ್ನು ಶೀಘ್ರ ಸಂಗ್ರಹಿಸಿ ಅನುದಾನವನ್ನು ನೇರ ಶಿಕ್ಷಕರ ಖಾತೆಗಳಿಗೆ ವರ್ಗಾಯಿಸಬೇಕು. ಅತ್ಯಂತ ಸಮರ್ಪಕವಾಗಿ ಈ ಪ್ರಕ್ರಿಯೆ ನಿರ್ವಹಣೆಯಾಗಬೇಕು ಎಂದು‌ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಶಿಕ್ಷಣ ಇಲಾಖೆಯ ಪ್ರಧಾನ‌ಕಾರ್ಯದರ್ಶಿ‌ಎಸ್.ಆರ್.ಉಮಾಶಂಕರ್, ಸಾರ್ವಜನಿಕ‌ಶಿಕ್ಷಣ‌ಇಲಾಖೆಯ ಆಯುಕ್ತ ಅನ್ಬುಕುಮಾರ್, ಪದವಿಪೂರ್ವ ಶಿಕ್ಷಣ ನಿರ್ದೇಶಕಿ‌ಸ್ನೇಹಲ್ ಸೇರಿದಂತೆ ಹಿರಿಯ‌ಅಧಿಕಾರಿಗಳು ಉಪಸ್ಥಿತರಿದ್ದರು.

Join Whatsapp
Exit mobile version