ಜನವರಿಯಲ್ಲಿ ನಡೆಯಲಿರುವ ಶ್ರೀಲಂಕಾ ವಿರುದ್ಧದ ಟಿ20 ಮತ್ತು ಏಕದಿನ ಸರಣಿಗೆ ಮಂಗಳವಾರ ರಾತ್ರಿ ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸಿದೆ.
ನಿರೀಕ್ಷೆಯಂತೆಯೇ, 3 ಪಂದ್ಯಗಳ ಟಿ20 ಸರಣಿಗೆ ಹಾರ್ದಿಕ್ ಪಾಂಡ್ಯಾರನ್ನು ನಾಯಕನನ್ನಾಗಿ ನೇಮಿಸಲಾಗಿದೆ.
ಟಿ20 ವಿಶ್ವಕಪ್ ಬಳಿಕ ನ್ಯೂಜಿಲೆಂಡ್ ಪ್ರವಾಸ ಕೈಗೊಂಡಿದ್ದ ಭಾರತ ತಂಡವನ್ನು ಪಾಂಡ್ಯಾ ಮುನ್ನಡೆಸಿದ್ದರು.
ಟಿ20 ಸರಣಿಯ ಬಳಿಕ ನಡೆಯಲಿರುವ ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ ಟೀಮ್ ಇಂಡಿಯಾವನ್ನು ಮುನ್ನಡೆಸಲಿದ್ದಾರೆ.
ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಕ್ಯಾಚ್ ಪಡೆಯುವ ವೇಳೆ ಕೈಬೆರಳಿಗೆ ಗಾಯ ಮಾಡಿಕೊಂಡಿದ್ದ ರೋಹಿತ್, ಸರಣಿಯ ಮಧ್ಯದಲ್ಲೇ ಭಾರತಕ್ಕೆ ಮರಳಿದ್ದರು.
ಜನವರಿ 3ರಂದು ಮುಂಬೈನಲ್ಲಿ ಟಿ20 ಸರಣಿಯ ಮೊದಲ ಪಂದ್ಯ ನಡೆಯಲಿದ್ದು, ಪುಣೆ ಮತ್ತು ರಾಜ್ ಕೋಟ್ ನಲ್ಲಿ ನಂತರದ ಎರಡು ಪಂದ್ಯಗಳು ನಡೆಯಲಿದೆ.
ಗುವಹಾಟಿ, ಕೋಲ್ಕತ್ತಾ ಹಾಗೂ ತಿರುವನಂತಪುರಂನಲ್ಲಿ ಏಕದಿನ ಪಂದ್ಯಗಳು ನಡೆಯಲಿದೆ.
ಶಿವಂ ಮಾವಿ, ಮುಕೇಶ್ ಕುಮಾರ್ ಹೊಸ ಮುಖ
ಉತ್ತರ ಪ್ರದೇಶದ ವೇಗಿ ಶಿವಂ ಮಾವಿ ಮತ್ತು ಬೆಂಗಾಲ್’ನ ಬೌಲರ್ ಮುಕೇಶ್, ಬಿಸಿಸಿಐ ಪ್ರಕಟಿಸಿದ ತಂಡದಲ್ಲಿರುವ ಹೊಸ ಮುಖಗಳಾಗಿದ್ದಾರೆ.
ಶುಕ್ರವಾರ ನಡೆದ ಐಪಿಎಲ್ ಮಿನಿ ಹರಾಜಿನಲ್ಲಿ ಈ ಇಬ್ಬರು ಬೌಲರ್ ಗಳು ಭಾರಿ ಮೊತ್ತ ಪಡೆಯುವಲ್ಲಿ ಯಶಸ್ವಿಯಾಗಿದ್ದರು.
ಕೊಹ್ಲಿಗೆ ವಿಶ್ರಾಂತಿ, ಪಂತ್’ಗೆ ಕೊಕ್
ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತು ಆರಂಭಿಕ ಬ್ಯಾಟರ್ ಕೆ.ಎಲ್. ರಾಹುಲ್ ಗೆ ವಿಶ್ರಾಂತಿ ನೀಡಲಾಗಿದೆ. ಇದೇ ವೇಳೆ ವಿಕೆಟ್ ಕೀಪರ್- ಬ್ಯಾಟ್ಸ್‌ಮನ್ ರಿಷಭ್ ಪಂತ್ ಮತ್ತು ಹಿರಿಯ ಬೌಲರ್ ಭುವನೇಶ್ವರ್ ಕುಮಾರ್ ಅವರನ್ನು ಟಿ20 ಮತ್ತು ಏಕದಿನ ತಂಡದಿಂದ ಕೈಬಿಡಲಾಗಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಋತುರಾಜ್ ಗಾಯಕ್ವಾಡ್ ಟೀಮ್ ಇಂಡಿಯಾಗೆ ಮರಳಿದ್ದಾರೆ.
ಯುವ ಬೌಲರ್‌ಗಳಾದ ಅರ್ಶದೀಪ್ ಸಿಂಗ್ ಮತ್ತು ಉಮ್ರಾನ್ ಮಲಿಕ್ ವೇಗದ ಬೌಲಿಂಗ್ ವಿಭಾಗವನ್ನು ನಿರ್ವಹಿಸಲಿದ್ದಾರೆ.
ಏಕದಿನ ತಂಡದಿಂದ ಹೊರಬಿದ್ದ ಧವನ್, ಮರಳಿದ ಶಮಿ
ಟೀಮ್ ಇಂಡಿಯಾದ ಹಂಗಾಮಿ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದ ಹಿರಿಯ ಎಡಗೈ ಬ್ಯಾಟ್ಸ್‌ಮನ್ ಶಿಖರ್ ಧವನ್’ರನ್ನು ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ಬಿಸಿಸಿಐ ಆಯ್ಕೆ ಮಾಡಿಲ್ಲ. ಗಾಯದಿಂದ ಚೇತರಿಸಿಕೊಂಡಿರುವ ಅನುಭವಿ ಬೌಲರ್ ಮುಹಮ್ಮದ್ ಶಮಿ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಟಿ20 ತಂಡ
ಹಾರ್ದಿಕ್ ಪಾಂಡ್ಯ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಋತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್ (ಉಪನಾಯಕ), ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್ , ಶಿವಂ ಮಾವಿ, ಮುಖೇಶ್ ಕುಮಾರ್.
ಏಕದಿನ ತಂಡ
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪ ನಾಯಕ), ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಮುಹಮ್ಮದ್. ಶಮಿ, ಮುಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಅರ್ಷದೀಪ್ ಸಿಂಗ್