ಬೆಂಗಳೂರು: ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಕಳೆದ 5 ದಿನಗಳಿಂದ ಕರ್ನಾಟಕದ ಅಲ್ಲಲ್ಲಿ ಮಳೆಯಾಗುತ್ತಿದ್ದು, ಇನ್ನೂ ಒಂದು ವಾರ ಆಗಸ್ಟ್ 31ರವರೆಗೂ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಾಳೆಯವರೆಗೂ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಮುಂದಿನ ಮೂರ್ನಾಲ್ಕು ದಿನಗಳ ಕಾಲ ಒಡಿಶಾ, ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ, ಉತ್ತರ ಪ್ರದೇಶ, ಜಾರ್ಖಂಡ್, ಬಿಹಾರ, ಪಶ್ಚಿಮ ಬಂಗಾಳ, ಸಿಕ್ಕಿಂ ಸೇರಿದಂತೆ ಹಲವು ರಾಜ್ಯಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸಮುದ್ರ ಭಾಗದಲ್ಲಿ 40 ರಿಂದ 50 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕಿಳಿಯದಂತೆ ಹವಾಮಾನ ಕೇಂದ್ರ ಎಚ್ಚರಿಕೆ ನೀಡಿದೆ.