►ನಾಡಿನ ನೆಮ್ಮದಿ ಕೆಡಿಸುವವರ ವಿರುದ್ಧ ಕ್ರಮ: ಸಿದ್ದರಾಮಯ್ಯ
ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ʼಕೋಮುವಾದಿ ಬಿಜೆಪಿಯನ್ನು ಸೋಲಿಸಲುʼ ರಾಜ್ಯದ ನಾನಾ ಭಾಗಗಳಲ್ಲಿ ಶ್ರಮಿಸಿದ ‘ಎದ್ದೇಳು ಕರ್ನಾಟಕ’ ಅಭಿಯಾನದ ನಿಯೋಗವು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಹಲವಾರು ವಿಚಾರಗಳ ಬಗ್ಗೆ ಚರ್ಚಿಸಿದೆ. ಲೋಕಸಭಾ ಚುನಾವಣೆಯಲ್ಲೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು, ಸಂವಿಧಾನದ ಆಶಯಗಳನ್ನು ಗೆಲ್ಲಿಸುವ ಮೂಲಕ ಬಿಜೆಪಿಯನ್ನು ಸೋಲಿಸಲು ಅಗತ್ಯವಾಗಿ ಮಾಡಬೇಕಾದ ಸಿದ್ಧತೆಗಳ ಬಗ್ಗೆ ಮಾತುಕತೆ ನಡೆಸಿದೆ.
‘ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಭಯದ ವಾತಾವರಣದಲ್ಲಿ ಬದುಕುವ ಸನ್ನಿವೇಶವನ್ನು ಬದಲಿಸಿ, ಸುರಕ್ಷತೆಯ ಭಾವ ಮೂಡಿಸಲು ಸರ್ಕಾರ ಕೆಲಸ ಮಾಡಲಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.
‘ನಾಡಿನ ಜನತೆ ಬಿಜೆಪಿ, ಆರ್ಎಸ್ಎಸ್ ಸಿದ್ಧಾಂತವನ್ನು ಚುನಾವಣೆಯಲ್ಲಿ ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ. ಇದಕ್ಕಾಗಿ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಶ್ರಮಿಸಿದವರ ನಿರೀಕ್ಷೆಗೆ ತಕ್ಕಂತೆ ಸರ್ಕಾರ ಕೆಲಸ ಮಾಡುತ್ತದೆ. ಕನ್ನಡ ನಾಡಿನ ನೆಮ್ಮದಿ ಕೆಡಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಇನ್ನು ಮುಂದೆ ಮತೀಯ ಗೂಂಡಾಗಿರಿಗೆ ಅವಕಾಶ ಇಲ್ಲ’ ಎಂದರು.
‘ಭೀತಿಯ ವಾತಾವರಣ ಸೃಷ್ಟಿಸುವವರು, ಸಾಮಾಜಿಕ ಜಾಲತಾಣಗಳ ಮೂಲಕ ಸಾಮರಸ್ಯ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ’ ಎಂದರು.
“ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮರುಪರಿಶೀಲಿಸಿ, ಹೊಸ ನೀತಿ ಜಾರಿ ಜೊತೆಗೆ ಹಲವು ಜನ ವಿರೋಧಿ ಕಾಯ್ದೆಗಳನ್ನು ರದ್ದುಪಡಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ” ಎಂದು ತಿಳಿಸಿದರು.
ನಿಯೋಗದಲ್ಲಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಕೆ.ಎಂ. ರಾಮಚಂದ್ರಪ್ಪ, ನೂರ್ ಶ್ರೀಧರ್, ವಿಜಯಮ್ಮ, ಮಲ್ಲಿಗೆ, ಜೆ.ಎಸ್. ಪಾಟೀಲ್, ಯೂಸುಫ್ ಖನ್ನಿ, ತಾರಾರಾವ್ ಸೇರಿದಂತೆ ವಿವಿಧ ಸಂಘಟನೆಗಳ 30ಕ್ಕೂ ಹೆಚ್ಚು ಪ್ರತಿನಿಧಿಗಳಿದ್ದರು.