ಕೇಂದ್ರ ಸರ್ಕಾರ ಕನ್ನಡಿಗರ ಭಾವನೆಗಳ ಜತೆ ಚೆಲ್ಲಾಟವಾಡುತ್ತಿದೆ: ಹೆಚ್.ಡಿ. ಕುಮಾರಸ್ವಾಮಿ ಕಿಡಿ

Prasthutha|

ಬೆಂಗಳೂರು: ಸತತ 18 ಗಂಟೆಗಳ ಕಾಲ ನಿರಂತರವಾಗಿ ಕನ್ನಡ ಕಾರ್ಯಕ್ರಮಗಳನ್ನು ನೀಡುತ್ತಿರುವ 101.3 ಎಫ್.ಎಂ. ರೈನ್ ಬೋ ಕನ್ನಡ ಕಾಮನಬಿಲ್ಲು ರೇಡಿಯೋ ವಾಹಿನಿಯ ಕತ್ತು ಕೊಯ್ಯುವ ಕೆಲಸಕ್ಕೆ ಕೈ ಹಾಕಿರುವುದು ಅಕ್ಷಮ್ಯ. ಈ ಮೂಲಕ ಕೇಂದ್ರ ಸರ್ಕಾರ ಕನ್ನಡಿಗರ ಭಾವನೆಗಳ ಜತೆ ಚೆಲ್ಲಾಟವಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸರಣಿ ಟ್ವೀಟ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಕನ್ನಡದ ಕೆಚ್ಚನ್ನು ಮಣಿಸಿ, ಕರ್ನಾಟಕವನ್ನು ಸಾಂಸ್ಕೃತಿಕವಾಗಿ ಬೆಂಗಾಡು ಮಾಡುವ ಸಕಲ ಪ್ರಯತ್ನವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ ಎನ್ನುವುದಕ್ಕೆ ಇದೊಂದು ಸಾಕ್ಷಿಯಾಗಿದೆ. ಈಗ ನೇರವಾಗಿ ಕನ್ನಡದ ವಿರುದ್ಧ ಸಂಚು ನಡೆಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಸೂರ್ಯೋದಯಕ್ಕೆ ಮೊದಲು ಪ್ರಸಾರ ಆರಂಭಿಸಿ ರಾತ್ರಿ 11ರ ತನಕ ಸತತ 11 ಗಂಟೆಗಳ ಕಾಲ ಕನ್ನಡ ಕಾರ್ಯಕ್ರಮ ನೀಡಿತ್ತಿದ್ದ ಆಕಾಶವಾಣಿ ವಾಹಿನಿಯನ್ನು ಇಲ್ಲದಾಗಿಸಲು ಯೋಜನೆ ರೂಪಿಸುತ್ತಿರುವುದು ಅಕ್ಷಮ್ಯ ಎಂದು ಅವರು ಆರೋಪಿಸಿದರು.

ರೈನ್ ಬೋ ಕನ್ನಡ ಕಾಮನಬಿಲ್ಲು ಕೇವಲ ರೇಡಿಯೋ ವಾಹಿನಿ ಮಾತ್ರವಲ್ಲ, ಕನ್ನಡಿಗರ ಹೃದಯ ಬಡಿತ, ಕನ್ನಡದ ಅಸ್ಮಿತೆ ಕೂಡ ಆಗಿದೆ. ಆದರೆ ಕೇಂದ್ರ ಸರ್ಕಾರ ಕನ್ನಡಿಗರ ಭಾವನೆಗಳ ಜತೆ ಚೆಲ್ಲಾಟ ಆಡುತ್ತಿದೆ. ಅಧಿಕಾರಿಗಳ ಮೂಲಕ ಕನ್ನಡಮ್ಮನ ರಕ್ತ ಬಗೆಯುವ ಹೀನ ಕೆಲಸ ಮಾಡುತ್ತಿದೆ ಎಂದು ಅವರು ಗುಡುಗಿದರು.

- Advertisement -

ಈ ಹಿಂದೆ ಕನ್ನಡಿಗರ ಮನೆಮನದಲ್ಲಿ ತುಂಬಿದ್ದ ಅಮೃತವರ್ಷಿಣಿಯನ್ನು ಮುಗಿಸಲಾಯಿತು. ಈಗ ಕನ್ನಡ ಕಾಮನಬಿಲ್ಲನ್ನು ಮುಗಿಸಲು ಹೊರಟಿದ್ದಾರೆ. ಕನ್ನಡ ವಿರೋಧಿ ಕೇಂದ್ರ ಸರ್ಕಾರ, ಕನ್ನಡದ್ರೋಹಿ ಅಧಿಕಾರಿಗಳ ಕಪಿಮುಷ್ಠಿಯಲ್ಲಿ ಸಿಲುಕಿರುವ ಕನ್ನಡದ ಆಕ್ರಂದನವನ್ನು ಇನ್ನೂ ಸಹಿಸಲು ಸಾಧ್ಯವಿಲ್ಲ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಆಯಕಟ್ಟಿನಲ್ಲಿ ಕೂತಿರುವ ಹಿರಿಯ ಅಧಿಕಾರಿಗಳು ಕಸಾಯಿಗಳಂತೆ ಸಾವಿರಾರು ವರ್ಷಗಳ ಅಭಿಜಾತ ಭಾಷೆ ಕನ್ನಡದ ಮೇಲೆ ದಾಳಿ ನಡೆಸಿ ಕ್ರೂರವಾಗಿ ವಧೆ ಮಾಡುತ್ತಿದ್ದಾರೆ. ಕನ್ನಡನಾಡನ್ನು ಉದ್ಧಾರ ಮಾಡುತ್ತೇವೆಂದು ಗೆದ್ದ ಸಂಸದ ಮಹಾಶಯರು ಕನ್ನಡಕ್ಕೆ ಆಗುತ್ತಿರುವ ಅನ್ಯಾಯವನ್ನು ಸಹಿಸುತ್ತಿರುವುದು ಹೊಣೆಗೇಡಿತನವೇ ಸರಿ ಎಂದು ತಿಳಿಸಿದರು.

ಕನ್ನಡಿಗರು ಸಹಿಷ್ಣುಗಳು, ಸೌಮ್ಯರು ಎಂಬುದು ವಾಸ್ತವ. ಹಾಗೆಂದು ಮಾತೃಭಾಷೆಗೆ ಕೊಳ್ಳಿ ಇಡುತ್ತಿರುವ ಭಾಷಾಂತಕರನ್ನು ನೋಡುತ್ತಾ ಸುಮ್ಮನೆ ಕೂರಲಾರರು. ಸಂಸದರೆಲ್ಲರೂ ಧ್ವನಿಯೆತ್ತಿ ಈ ರೇಡಿಯೋ ವಾಹಿನಿಯನ್ನು ಉಳಿಸಬೇಕು. ಮುಚ್ಚುವುದು ಅಥವಾ ಇನ್ನೊಂದರಲ್ಲಿ ವಿಲೀನ ಮಾಡುವುದನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಅವರು ಗುಡುಗಿದರು.

Join Whatsapp