ಬೆಂಗಳೂರು: ‘ನನ್ನನ್ನು ಪಕ್ಷದಲ್ಲಿ ಮೂಲೆಗುಂಪು ಮಾಡಿದ್ದಾರೆ ಎಂಬುದು ಸತ್ಯಕ್ಕೆ ದೂರವಾದ ಮಾತು. ಪುರಸಭೆ ಸದಸ್ಯನಾಗಿದ್ದವನನ್ನು ನಮ್ಮ ಪಕ್ಷ ನಾಲ್ಕು ಬಾರಿ ಮುಖ್ಯಮಂತ್ರಿ ಮಾಡಿದೆ. ಸಾಮಾನ್ಯ ಕಾರ್ಯಕರ್ತನನ್ನು ಇಷ್ಟು ಎತ್ತರಕ್ಕೆ ಬೆಳೆಸಿರುವುದೇ ಬಿಜೆಪಿ. ನಾನು ಸಂತೃಪ್ತಿ, ಸಮಾಧಾನದಿಂದ ಇದ್ದೇನೆ’ ಎಂದು ಬಿಜೆಪಿ ಶಾಸಕ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಶಿಕಾರಿಪುರ ವಿಧಾನಸಭಾ ಕ್ಷೇತ್ರವನ್ನು ನನ್ನ ಮಗ ಬಿ.ವೈ. ವಿಜಯೇಂದ್ರಗೆ ಬಿಟ್ಟು ಕೊಡುವುದಾಗಿ ಅಲ್ಲಿನ ಜನರ ಒತ್ತಾಯಕ್ಕೆ ಮಣಿದು ಹೇಳಿಕೆ ನೀಡಿದ್ದೆ. ಆದರೆ, ಈ ವಿಚಾರದಲ್ಲಿ ಬಿಜೆಪಿ ವರಿಷ್ಠರ ತೀರ್ಮಾನವೇ ಅಂತಿಮ’ ಎಂದು ಹೇಳಿದರು.
‘ರಾಜ್ಯದಾದ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟಿಸುತ್ತೇನೆ. ಮುಂದಿನ ಚುನಾವಣೆಯಲ್ಲಿ 140 ಶಾಸಕರನ್ನು ಗೆಲ್ಲಿಸಿಕೊಂಡು ಬಂದು, ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುತ್ತೇನೆ’ ಎಂದರು.
‘ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ನೇಮಕಾತಿ ಪರೀಕ್ಷೆಯ ಅಕ್ರಮದಲ್ಲಿ ವಿಜಯೇಂದ್ರ ಭಾಗಿಯಾಗಿದ್ದಾರೆ ಎಂದು ಸಿದ್ದರಾಮಯ್ಯ ಮಾಡಿರುವ ಆರೋಪದಲ್ಲಿ ಹುರುಳಿಲ್ಲ. ವಿರೋಧ ಪಕ್ಷದ ನಾಯಕರ ಸ್ಥಾನಕ್ಕೆ ಇಂತಹ ಹೇಳಿಕೆ ಶೋಭೆ ತರುವುದಿಲ್ಲ. ತಾನು ಕಳ್ಳ ಪರರ ನಂಬ ಎಂಬ ಗಾದೆಯಂತೆ ಅವರು ವರ್ತಿಸುತ್ತಿದ್ದಾರೆ. ಸಿದ್ದರಾಮಯ್ಯ ರಾಜ್ಯದ ಜನರ ಕ್ಷಮೆ ಯಾಚಿಸಬೇಕು’ ಎಂದು ಆಗ್ರಹಿಸಿದರು.