ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಟ್ಟುಕೊಂಡು ಪರೋಕ್ಷ ವಾಗ್ದಾಳಿ ನಡೆಸಿರುವ ಬಿ.ಕೆ. ಹರಿಪ್ರಸಾದ್ ಅವರ ನಡೆ ಬಗ್ಗೆ ಪಕ್ಷವು ಗಮನಿಸುತ್ತಿದ್ದು, ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಸೋಮವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹರಿಪ್ರಸಾದ್ ಪಕ್ಷದ ಹಿರಿಯ ನಾಯಕರು. ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯಸಭಾ ಸದಸ್ಯ, ವಿಧಾನ ಪರಿಷತ್ತಿನಲ್ಲಿ ಪಕ್ಷದ ನಾಯಕರಾಗಿ ಕೆಲಸ ಮಾಡಿರುವವರು. ಅವರಿಂದ ಇಂತಹ ಮಾತು ಬರಬಾರದಿತ್ತು. ಅವರ ಮಾತುಗಳನ್ನು ಕೇಳಿಸಿಕೊಂಡು ಪಕ್ಷದ ರಾಷ್ಟ್ರೀಯ ನಾಯಕರು ಸುಮ್ಮನೆ ಕೂರುವುದಿಲ್ಲ’ ಎಂದು ಹೇಳಿದರು.