Home ಟಾಪ್ ಸುದ್ದಿಗಳು ಮೋದಿ ತಂಗಿದ್ದ ಹೋಟೆಲ್ ಬಿಲ್ ಬಾಕಿ ರಾಜ್ಯ ಸರ್ಕಾರವೇ ಭರಿಸಲಿದೆ: ಈಶ್ವರ ಖಂಡ್ರೆ

ಮೋದಿ ತಂಗಿದ್ದ ಹೋಟೆಲ್ ಬಿಲ್ ಬಾಕಿ ರಾಜ್ಯ ಸರ್ಕಾರವೇ ಭರಿಸಲಿದೆ: ಈಶ್ವರ ಖಂಡ್ರೆ

ಬೆಂಗಳೂರು: ಹುಲಿ ಯೋಜನೆಗೆ 50 ವರ್ಷ ತುಂಬಿದ ಅಂಗವಾಗಿ 2023 ಏಪ್ರಿಲ್ ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಹೊಟೆಲ್ ಬಿಲ್ ಬಾಕಿಯನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದ್ದಾರೆ.

ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ, ರಾಷ್ಟ್ರಪತಿ ಮೊದಲಾದ ಗಣ್ಯರು ಆಗಮಿಸಿದಾಗ ಆತಿಥ್ಯ ನೀಡುವುದು ರಾಜ್ಯ ಸರ್ಕಾರದ ಸಂಪ್ರದಾಯವಾಗುತ್ತದೆ. ಆದರೆ ಕಳೆದ ವರ್ಷ ಆ ಸಮಯದಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ರಾಜ್ಯ ಸರ್ಕಾರ ಈ ಕಾರ್ಯಕ್ರಮದ ಆಯೋಜನೆಯಲ್ಲಿ ಯಾವುದೇ ಪಾತ್ರ ವಹಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಉಂಟಾಗಿರುವ ಗೊಂದಲ ನಿವಾರಿಸಲು ರಾಜ್ಯ ಸರ್ಕಾರವೇ ಮೈಸೂರಿನ ರಾಡಿಸನ್ ಬ್ಲೂ ಹೊಟೆಲ್ ಬಿಲ್ ಬಾಕಿ ಪಾವತಿಸಲು ನಿರ್ಧರಿಸಿದೆ ಎಂದು ತಿಳಿಸಿದರು.

2023ರ ಏಪ್ರಿಲ್ ನಲ್ಲಿ ನಡೆದ ಕಾರ್ಯಕ್ರಮವನ್ನು ಸಂಪೂರ್ಣವಾಗಿ ರಾಷ್ಟ್ರೀಯ ಹುಲಿ ಸಂರಕ್ಷಣೆ ಪ್ರಾಧಿಕಾರವೇ ಆಯೋಜಿಸಿತ್ತು. ಈ ಕಾರ್ಯಕ್ರಮಕ್ಕೆ ಒಟ್ಟಾರೆ 6 ಕೋಟಿ 33 ಲಕ್ಷ ರೂ. ವೆಚ್ಚವಾಗಿದ್ದು, ಎನ್.ಟಿ.ಸಿ.ಎ. ರಾಜ್ಯಕ್ಕೆ 3 ಕೋಟಿ ರೂ. ಪಾವತಿಸಿದೆ. ಉಳಿದ ಹಣ ಪಾವತಿಸಿಲ್ಲ. ಹೀಗಾಗಿ ಮೈಸೂರಿನ ರಾಡಿಸನ್ ಬ್ಲೂ ಹೋಟೆಲ್‌ನವರು ಕಾರ್ಯಕ್ರಮದ ಆಯೋಜನೆಗೆ ಸ್ಥಳೀಯ ಬೆಂಬಲ ನೀಡಿದ್ದ ಅರಣ್ಯ ಇಲಾಖೆಗೆ ಪತ್ರ ಬರೆದಿದ್ದಾರೆ ಎಂದರು.

Join Whatsapp
Exit mobile version