ಕೋಮು ಶಕ್ತಿಗಳ ವಿರುದ್ಧ ದೇಶದಲ್ಲಿ ಮತ್ತೊಂದು ಸ್ವಾತಂತ್ರ್ಯ ಸಂಗ್ರಾಮದ ಅಗತ್ಯವಿದೆ: ಡಿಸಿಎಂ ಡಿಕೆಶಿ

Prasthutha|

ಬೆಂಗಳೂರು: ಅಹಿಂಸೆ, ಶಾಂತಿ, ಸೌಹಾರ್ದತೆ, ಭ್ರಾತೃತ್ವದ ಭದ್ರ ಬುನಾದಿಯ ಮೇಲೆ ನಿರ್ಮಾಣವಾಗಿರುವ ಈ ದೇಶದಲ್ಲಿ ಧರ್ಮ, ಜಾತಿ, ವರ್ಣದ ವಿಷ ಬೀಜ ಭಿತ್ತಲಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ದೇಶದಲ್ಲಿ ಮತ್ತೊಂದು ಸ್ವಾತಂತ್ರ್ಯ ಸಂಗ್ರಾಮದ ಅಗತ್ಯವಿದೆ. ಅಂದಿನ ಸ್ವಾತಂತ್ರ್ಯ ಸಂಗ್ರಾಮ ಬ್ರಿಟಿಷರ ವಿರುದ್ಧ ನಡೆದಿತ್ತು, ಇಂದಿನ ಸಂಗ್ರಾಮ ಕೋಮುವಾದಿ ಶಕ್ತಿಗಳ ವಿರುದ್ಧ ನಡೆಯಬೇಕು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

- Advertisement -


ಕೆಪಿಸಿಸಿ ಕಚೇರಿಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಭಾಷಣ ಮಾಡಿದ ಅವರು, ಅಂದು ಕಾಂಗ್ರೆಸ್ ನೇತೃತ್ವದಲ್ಲಿ ದೇಶವೇ ಒಂದಾಗಿತ್ತು, ಇಂದು ಕಾಂಗ್ರೆಸ್ ನೇತೃತ್ವದಲ್ಲಿ “ಇಂಡಿಯಾ” ಒಂದಾಗಿದೆ. ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ಮೊದಲು ಕ್ರಾಂತಿಯ ಕಿಚ್ಚು ಹಚ್ಚಿದ್ದೇ ಕರ್ನಾಟಕ. ಹೀಗೆ ಸ್ವಾತಂತ್ರ್ಯ ಹೋರಾಟಕ್ಕೆ ವೇದಿಕೆಯಾಗಿದ್ದ ಕರ್ನಾಟಕದಲ್ಲೇ ಈಗ ಹೊಸ “ಇಂಡಿಯಾ” ಕೂಡ ಉದಯವಾಗಿದೆ. ಈ ಇಂಡಿಯಾಗೆ ಶಕ್ತಿ ತುಂಬಿ ದೇಶವನ್ನು ರಕ್ಷಣೆ ಮಾಡಿಕೊಳ್ಳುವ ಮಹತ್ತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.


ಸ್ವಾತಂತ್ರ್ಯ ಎಂದರೆ ಬೆಲೆ ಕಟ್ಟಿ ಪಡೆಯುವ ವಸ್ತುವಲ್ಲ. ಅದು ಬದುಕಿನ ಉಸಿರು. ಹೀಗಾಗಿ ಸ್ವಾತಂತ್ರ್ಯಕ್ಕೆ ನಾವು ಬೆಲೆ ಕಟ್ಟಲು ಸಾಧ್ಯವೇ?” ಎಂದು ಮಹಾತ್ಮ ಗಾಂಧಿ ಹೇಳಿದ್ದರು. ಮಹಾತ್ಮಾ ಗಾಂಧಿ, ಜವಹರಲಾಲ್ ನೆಹರೂ, ಮೌಲಾನ ಅಜಾದ್, ಭಗತ್ ಸಿಂಗ್, ವಲ್ಲಭಬಾಯ್ ಪಟೇಲ್, ಡಾ. ಬಿ. ಆರ್. ಅಂಬೇಡ್ಕರ್, ಸರೋಜಿನಿ ನಾಯ್ಡು ಅವರ ಹೋರಾಟದ ಫಲವಾಗಿ ನಾವು ಸ್ವಾತಂತ್ರ್ಯ ಭಾರತದ ಫಲಾನುಭವಿಗಳಾಗಿದ್ದೇವೆ. ಈ ದೇಶಕ್ಕೆ ಸ್ವಾತಂತ್ರ್ಯ ತಂದದ್ದು, ದೇಶ ಕಟ್ಟಿದ್ದು, ಅಭಿವೃದ್ಧಿಯ ಪಥದಲ್ಲಿ ದೇಶವನ್ನು ನಿಲ್ಲಿಸಿದ್ದು ಕಾಂಗ್ರೆಸ್ ಪಕ್ಷ. ಸ್ವಾತಂತ್ರ್ಯ ಎಂದರೆ ಅದು ಕೇವಲ ರಾಜಕೀಯ ನಿರ್ಧಾರವೂ ಅಲ್ಲ ಅಥವಾ ಹೊಸ ಸಂವಿಧಾನವಲ್ಲ. ಇದು ಮನಸ್ಸು ಹಾಗೂ ಹೃದಯಕ್ಕೆ ಸಂಬಂಧಿಸಿದ್ದು. ಒಂದು ವೇಳೆ ಮನಸ್ಸು ಸಂಕುಚಿತವಾಗಿದ್ದರೆ ಅಥವಾ ಗೊಂದಲದಲ್ಲಿದ್ದರೆ, ಹೃದಯ ಅಸೂಯೆ ಅಥವಾ ದ್ವೇಷದಿಂದ ತುಂಬಿದ್ದರೆ ಅಲ್ಲಿ ಸ್ವಾತಂತ್ರ್ಯ ಎಂಬುದು ಅಸ್ತಿತ್ವದಲ್ಲಿರುವುದಿಲ್ಲ ಎಂದು ನೆಹರು ಹೇಳಿದ್ದರು.

Join Whatsapp