ಬಿಜೆಪಿಗೆ ಚನ್ನಪಟ್ಟಣ ಕ್ಷೇತ್ರ ಬಿಟ್ಟುಕೊಡುವ ಒಪ್ಪಂದ ಆಗಿಲ್ಲ: ಹೆಚ್‌ಡಿಕೆ

Prasthutha|

- Advertisement -

ರಾಮನಗರ: ಲೋಕಸಭೆ ಚುನಾವಣೆ ವೇಳೆ ಮಂಡ್ಯದಿಂದ ಸ್ಪರ್ಧಿಸುವ ಮೊದಲು ಚನ್ನಪಟ್ಟಣ ವಿಧಾನಸಭೆ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡುವ ಬಗ್ಗೆ ಯಾವುದೇ ಚರ್ಚೆ ಅಥವಾ ಒಪ್ಪಂದ ಆಗಿರಲಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಜೆಡಿಎಸ್ ಕಾರ್ಯಕರ್ತರ ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಚುನಾವಣೆ ಸಮೀಪಿಸುತ್ತಿದೆ. ಯೋಗೇಶ್ವರ್ ಅವರಿಗೆ ಅಥವಾ ಇನ್ಯಾರಿಗೆ ಆಗಲಿ ಕ್ಷೇತ್ರವನ್ನು ಬಿಟ್ಟುಕೊಡಬೇಕೆಂದು ಬಿಜೆಪಿ ವರಿಷ್ಠರ ಜೊತೆ ಒಪ್ಪಂದವಾಗಿರಲಿಲ್ಲ. ಅವತ್ತು ಏನು ನಡೆಯಿತು ಎಂದು ಹೇಳಲೇಬೇಕು. ಜನರಿಗೆ ಸತ್ಯ ಗೊತ್ತಾಗಬೇಕು ಎಂಬುದು ನನ್ನ ಉದ್ದೇಶ. ಬೆಂಗಳೂರು ಗ್ರಾಮಾಂತರ ಲೋಕಾಸಭೆ ಕ್ಷೇತ್ರದಿಂದ ಡಾ.ಸಿ.ಎನ್ ಮಂಜುನಾಥ್ ಅವರು ಬಿಜೆಪಿ ಅಭ್ಯರ್ಥಿಯಾಗಲು ಕೇಂದ್ರದ ಗೃಹ ಸಚಿವರಾದ ಅಮಿತ್ ಶಾ ಅವರೇ ಮೂಲ ಕಾರಣ. ಅವರ ಒತ್ತಾಯಕ್ಕೆ ಗೌರವ ಕೊಟ್ಟು, ಅವರ ಮಾತಿಗೆ ತಲೆಬಾಗಿ ಅವರನ್ನು ಅಭ್ಯರ್ಥಿ ಮಾಡಲಾಯಿತು ಎಂದರು.

- Advertisement -

ಈ ಕ್ಷಣದ ತನಕ ಚನ್ನಪಟ್ಟಣ ಕ್ಷೇತ್ರದಲ್ಲಿ ಅಭ್ಯರ್ಥಿ ಯಾರಾಗಬೇಕು ಎಂದು ನಾನು ನಿರ್ಧಾರ ಮಾಡಿಲ್ಲ. ಕಾರ್ಯಕರ್ತರ ಸಭೆಗಳನ್ನು ಮಾಡಲಾಗುತ್ತಿದೆ. ಅಂತಿಮವಾಗಿ ರಾಜ್ಯ ಮತ್ತು ದೆಹಲಿ ಮಟ್ಟದ ನಾಯಕರ ಜತೆ ಚರ್ಚೆ ನಡೆಸಿ ನಿರ್ಧಾರ ಮಾಡಲಾಗುವುದು. ಬಿಜೆಪಿ ನಾಯಕರು, ಕಾರ್ಯಕರ್ತರು ಸಭೆ ಮಾಡಿರುವುದರಲ್ಲಿ ತಪ್ಪೇನಿಲ್ಲ. ಅದನ್ನು ತಪ್ಪು ಎಂದು ನಾನು ಹೇಳಲಾರೆ. ಚನ್ನಪಟ್ಟಣ ಜೆಡಿಎಸ್ ಭದ್ರಕೋಟೆಯಾಗಿದೆ. ಕಾರ್ಯಕರ್ತರ ಅಭಿಪ್ರಾಯದಂತೆ ನಾನು ನಿರ್ಧಾರ ಕೈಗೊಳ್ಳಬೇಕಿದೆ. ಏಕೆಂದರೆ ಕಾರ್ಯಕರ್ತರು ಪಕ್ಷವನ್ನು ಬಲಿಷ್ಠವಾಗಿ ಸಂಘಟನೆ ಮಾಡಿಕೊಂಡಿದ್ದಾರೆ. ಅವರ ಅಭಿಪ್ರಾಯಕ್ಕೆ ವಿರುದ್ಧವಾಗಿ ನಾನು ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.



Join Whatsapp