ಅಲ್ಪಸಂಖ್ಯಾತರ ವಿಚಾರದಲ್ಲಿ ಬಿಜೆಪಿ, ಕಾಂಗ್ರೆಸ್ ಮಧ್ಯೆ ಯಾವುದೇ ವ್ಯತ್ಯಾಸವಿಲ್ಲ: ಬಿ.ಎಂ. ಫಾರೂಕ್

Prasthutha|

ಬೆಂಗಳೂರು : ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷವನ್ನು ಬೇರೆ ಬೇರೆ ರೀತಿಯಲ್ಲಿ ನೋಡಲು ಸಾಧ್ಯವಿಲ್ಲ. ಎರಡೂ ರಾಷ್ಟ್ರೀಯ ಪಕ್ಷಗಳೂ ಕೂಡ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಅವೆರಡರ ಮಧ್ಯೆ ಯಾವುದೇ ವ್ಯತ್ಯಾಸವಿಲ್ಲ ಎಂದು ವಿಧಾನ ಪರಿಷತ್‌ನ ಜೆಡಿಎಸ್ ಸದಸ್ಯ ಬಿ.ಎಂ. ಫಾರೂಕ್ ಹೇಳಿದರು.

- Advertisement -

ಬಿಜೆಪಿ ಜತೆ ಜೆಡಿಎಸ್ ಮೈತ್ರಿ ಕುರಿತು ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಅಲ್ಪಸಂಖ್ಯಾತರಿಗೆ ಏನು ನೀಡಿದೆ ಎಂದು ಪ್ರಶ್ನೆ ಮಾಡಿದ್ದಾರೆ.

ಅಲ್ಪಸಂಖ್ಯಾತರು ದೀರ್ಘ ಕಾಲದಿಂದಲೂ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿಕೊಂಡು ಬಂದಿದ್ದಾರೆ. ಬಿಜೆಪಿ ಸರ್ಕಾರ ಹಿಂಪಡೆದಿದ್ದ ಶೇಕಡ 4ರಷ್ಟು ಮೀಸಲಾತಿಯನ್ನು ಅಲ್ಪಸಂಖ್ಯಾತರಿಗೆ ಮರಳಿ ನೀಡುತ್ತೇವೆ ಕಾಂಗ್ರೆಸ್ ಭರವಸೆ ನೀಡಿತ್ತು. ಅಧಿಕಾರಕ್ಕೆ ಬಂದು ನೂರು ದಿನಗಳು ಕಳೆದರೂ ತೀರ್ಮಾನ ಆಗಿಲ್ಲ. ಅಲ್ಪಸಂಖ್ಯಾತರ ಅಭಿವೃದ್ಧಿಗೆ 10,000 ಕೋಟಿ ರೂ. ಒದಗಿಸುವ ಭರವಸೆಯನ್ನು ಅವರು ಮರೆತೇಬಿಟ್ಟಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

- Advertisement -

‘ಮೈತ್ರಿಯ ಷರತ್ತುಗಳ ಬಗ್ಗೆ ಎಚ್.ಡಿ. ದೇವೇಗೌಡರು ಮತ್ತು ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚಿಸುತ್ತೇನೆ. ಸ್ಪಷ್ಟವಾದ ಮಾಹಿತಿ ಸಿಕ್ಕ ಬಳಿಕವೇ ಅಭಿಪ್ರಾಯ ವ್ಯಕ್ತಪಡಿಸಲು ಸಾಧ್ಯ’ ಎಂದು ಹೇಳಿದರು.

Join Whatsapp