ನವದೆಹಲಿ: ದೆಹಲಿಯ ಸೀಲಾಂಪುರ್‌ನಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಇಂಡಿಯಾ ಬಣದ ಮಿತ್ರಪಕ್ಷವಾದ ಆಮ್ ಆದ್ಮಿ ಪಕ್ಷದ ವಿರುದ್ಧವೇ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮತ್ತು ಪ್ರಧಾನಿ ನರೇಂದ್ರ ಮೋದಿ ನಡುವೆ ಯಾವುದೇ ವ್ಯತ್ಯಾಸವಿಲ್ಲ. ಬಿಜೆಪಿ ಜನರನ್ನು ಪರಸ್ಪರರ ವಿರುದ್ಧ ಹೋರಾಡಲು ಪ್ರೋತ್ಸಾಹಿಸುವ ಮೂಲಕ ಸಂಘರ್ಷವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ.
ಹಣದುಬ್ಬರವನ್ನು ಕಡಿಮೆ ಮಾಡುವ ಭರವಸೆಗಳನ್ನು ಈಡೇರಿಸುವಲ್ಲಿ ಮೋದಿ- ಕೇಜ್ರಿವಾಲ್ ಈ ಇಬ್ಬರೂ ನಾಯಕರು ವಿಫಲರಾಗಿದ್ದಾರೆ. ಅವರು ಬಡವರನ್ನು ಇನ್ನಷ್ಟು ಬಡವರನ್ನಾಗಿ ಮಾಡುತ್ತಾರೆ ಮತ್ತು ಶ್ರೀಮಂತರು ಶ್ರೀಮಂತರಾಗುತ್ತಲೇ ಇರುತ್ತಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಇದೇ ವೇಳೆ ಸಂಪನ್ಮೂಲಗಳ ಅಸಮಾನ ಹಂಚಿಕೆಯ ಬಗ್ಗೆಯೂ ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಹಿಂದುಳಿದ ಸಮುದಾಯಗಳಿಗೆ ಅವರ ನ್ಯಾಯಯುತ ಪಾಲನ್ನು ನಿರಾಕರಿಸಲಾಗುತ್ತಿದೆ. ಹಿಂದುಳಿದ ಮತ್ತು ಅಲ್ಪಸಂಖ್ಯಾತ ಸಮುದಾಯಗಳಿಗೆ, ವಿಶೇಷವಾಗಿ ಜಾತಿ ಜನಗಣತಿಗೆ ಸಂಬಂಧಿಸಿದಂತೆ ಜನರು ತಮ್ಮ ಹಕ್ಕುಗಳನ್ನು ಪಡೆಯುವುದನ್ನು ಪಿಎಂ ಮೋದಿ ಮತ್ತು ಅರವಿಂದ್ ಕೇಜ್ರಿವಾಲ್ ಇಬ್ಬರೂ ಬಯಸುತ್ತಿಲ್ಲ ಎಂದು ರಾಹುಲ್ ಗಾಂಧಿ ಆರೋಪಿಸಿದರು.