ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣ: ರಾಜ್ಯದಲ್ಲಿ ನಾಲ್ವರು ಆತ್ಮಹತ್ಯೆ

Prasthutha|

ಬೆಂಗಳೂರು: ರಾಜ್ಯದಲ್ಲಿ ಶನಿವಾರ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಅನುತ್ತೀರ್ಣ ಹಾಗೂ ಕಡಿಮೆ ಅಂಕ ಬಂದಿದೆ ಎಂದು ನೊಂದು ನಾಲ್ವರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

- Advertisement -

ಮೂವರು ವಿದ್ಯಾರ್ಥಿನಿಯರು ಹಾಗೂ ಓರ್ವ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಂಡ್ಯದ ವಿದ್ಯಾರ್ಥಿನಿ ಆತ್ಮಹತ್ಯೆ

- Advertisement -

 ಮಂಡ್ಯ:  ಇಂದು ಪ್ರಕಟವಾದ ದ್ವಿತೀಯ  ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಮೂರು ವಿಷಯಗಳಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿನಿಯೊಬ್ಬಳು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದಲ್ಲಿ ನಡೆದಿದೆ.

ಮಹದೇವಪುರ ಗ್ರಾಮದ ಜಗದೀಶ್ ಎಂಬವರ ಪುತ್ರಿ, ಮಂಡ್ಯದ ಸ್ಯಾಂತೋ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸ್ಪಂದನಾ (17) ಶನಿವಾರ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇಂದು ಪ್ರಕಟಗೊಂಡ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ಸ್ಪಂದನಾ ಮೂರು ವಿಷಯಗಳಲ್ಲಿ ಅನುತ್ತೀರ್ಣರಾಗಿದ್ದರು ಎನ್ನಲಾಗಿದೆ. ಇದರಿಂದ ಮನನೊಂದು ಮನೆಯ ಕೊಠಡಿಗೆ ತೆರಳಿ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಎಷ್ಟೇ ಹೊತ್ತಾದರೂ ಕೊಠಡಿಯಿಂದ ಮಗಳು ಹೊರಗೆ ಬಾರದಿದ್ದುದನ್ನು ಕಂಡ ಪೋಷಕರು ಕಿಟಕಿಯಲ್ಲಿ ನೋಡಿದಾಗ ನೇಣು ಹಾಕಿಕೊಂಡಿರುವುದು ಬೆಳಕಿಗೆ ಬಂದಿದೆ.

ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.

ಮಡಿಕೇರಿಯಲ್ಲೂ ಕಡಿಮೆ ಅಂಕ ಬಂದಿದೆ ಎಂದು ವಿದ್ಯಾರ್ಥಿನಿಯೊಬ್ಬಳು ಇಂದು ಮಧ್ಯಾಹ್ನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಾರವಾರದಲ್ಲಿ ವಿದ್ಯಾರ್ಥಿ ನೇಣಿಗೆ ಶರಣು

ಪಿಯುಸಿಯಲ್ಲಿ ಫೈಲ್ ಆದ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕಡ್ಲೆ ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಪ್ರಣಮ್ ಈಶ್ವರ್ ನಾಯ್ಕ(18) ಎಂದು ಗುರುತಿಸಲಾಗಿದೆ.

ಎ.ವಿ. ಬಾಳಿಗ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ವಿದ್ಯಾರ್ಥಿ ವ್ಯಾಸಂಗ ಮಾಡುತ್ತಿದ್ದ, ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ಅನುತ್ತೀರ್ಣ ಹಿನ್ನೆಲೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಘಟನಾ ಸ್ಥಳಕ್ಕೆ ಕುಮಟಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 ಕಡಿಮೆ ಅಂಕ: ನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

ಮಡಿಕೇರಿ: ಪಿ.ಯು.ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದ ಹಿನ್ನೆಲೆಯಲ್ಲಿ  ಮನ ನೊಂದು ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಶಾಲನಗರ ಸಮೀಪ ಬಸವನ ಹಳ್ಳಿಯಲ್ಲಿ ನಡೆದಿದೆ.

ಬಸವನಹಳ್ಳಿಯ ಹೆರೂರು ನಿವಾಸಿ ನಿವೃತ ಯೋಧ ಶುಭಾಷ್  ಅವರ ಪುತ್ರಿ ಸಂದ್ಯಾ (18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದು, ಇಂದು ಪ್ರಕಟವಾದ ದ್ವಿತಿಯ  ಪಿಯುಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಳು ಎನ್ನಲಾಗಿದೆ.

ಕುಶಾಲನಗರ ವಿವೇಕಾನಂದ ಕಾಲೇಜಿನಲ್ಲಿ ಸಂದ್ಯಾ ದ್ವಿತೀಯ ಪಿಯುಸಿ ಓದುತ್ತಿದ್ದಳು. ಸ್ಥಳಕ್ಕೆ ಕುಶಾಲನಗರ ಪೊಲೀಸರು ಭೇಟಿ, ಪ್ರಕರಣ ದಾಖಲಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ.

ಗದಗದಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

ಗದಗ ನಗರದ ಖಾಸಗಿ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಪವಿತ್ರ ಲಿಂಗದಾಳ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇವರು ಹರ್ತಿ ಗ್ರಾಮದ ನಿವಾಸಿಯಾಗಿದ್ದು, ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣಗೊಂಡ ಕಾರಣಕ್ಕೆ ಪವಿತ್ರ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


Join Whatsapp