ಬೆಂಗಳೂರು: ಮಕ್ಕಳಲ್ಲಿ ಕಂಡುಬರುವ ಟೊಮೆಟೊ ಜ್ವರ ಹರಡುವಿಕೆ ತಡೆಗಟ್ಟುವ ಸಲುವಾಗಿ ಕೇರಳ ಗಡಿಭಾಗದ ಜಿಲ್ಲೆಗಳಲ್ಲಿ ಕಟ್ಟೆಚ್ಚರದ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಟೊಮೆಟೊ ಜ್ವರ ಪ್ರಕರಣಗಳು 5 ವರ್ಷ ವಯಸ್ಸಿನೊಳಗಿನ ಮಕ್ಕಳಲ್ಲಿ ಕಾಣಿಸಿಕೊಂಡಿದ್ದು, ಈ ರೋಗ, ಚರ್ಮದ ತುರಿಕೆ, ಕೆಂಪಾಗುವುದು, ನೀರಡಿಕೆ ಮೊದಲಾದ ಲಕ್ಷಣಗಳನ್ನು ಹೊಂದಿದೆ.
ಕೇರಳದಲ್ಲಿ ರೋಗದ ಪ್ರಕರಣಗಳು ಪತ್ತೆಯಾಗಿರುವುದರಿಂದ ಮಂಗಳೂರು, ಉಡುಪಿ, ಕೊಡಗು, ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಗಳಿಗೆ ಕೇರಳದಿಂದ ಆಗಮಿಸುವ ಪ್ರಯಾಣಿಕರ ಮೇಲೆ ಹೆಚ್ಚು ನಿಗಾ ಇರಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.